*ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ನೋಟಿಸ್*: *ಅಕ್ಟೋಬರ್ 27ಕ್ಕೆ ವಿಚಾರಣೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿಗೆ ನೀಡಿದ್ದ ಶಿಕ್ಷೆಗೆ ತಡೆ ಹಾಗೂ ಜಾಮೀನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯಿತು. ಸಿಬಿಐ ಮತ್ತು ಯೋಗೀಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಚಂದ್ರಶೇಖರ್ ಅವರಿದ್ದ ಪೀಠವು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ನಿಗದಿಪಡಿಸಿದೆ.
ಸಿಬಿಐ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ವಾದ ಮಂಡಿಸಿ, ಶಿಕ್ಷೆಗೆ ತಡೆಯಾಜ್ಞೆ ನೀಡುವುದು ಅಪರೂಪದ ಸಂದರ್ಭಗಳಲ್ಲಿ ಮಾತ್ರ ಆಗಬೇಕು ಎಂದು ಹೇಳಿದರು. ಈ ಸಂಬಂಧ ಸುಪ್ರೀಂ ಕೋರ್ಟ್ನ ಮೂರು ತೀರ್ಪುಗಳನ್ನು ಉಲ್ಲೇಖಿಸಿದ ಅವರು, ಸಾರ್ವಜನಿಕ ಸೇವಕರಿಗೆ ಶಿಕ್ಷೆಯ ಅಮಾನತು ನೀಡುವಾಗ ವಿಶೇಷ ಎಚ್ಚರಿಕೆ ಅಗತ್ಯ ಎಂದು ವಾದಿಸಿದರು.
ಹಿಂದೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದ ವಿಚಾರವನ್ನೂ ಸಿಬಿಐ ಪ್ರಸ್ತಾಪಿಸಿತು. ಹಿಂದಿನ ಎರಡು ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಹೈಕೋರ್ಟ್ ಮುಂದೆ ಬಹಿರಂಗಪಡಿಸಿರಲಿಲ್ಲ ಎಂಬ ವಾದವನ್ನೂ ಮಂಡಿಸಿತು.
ವಿನಯ್ ಕುಲಕರ್ಣಿ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಎರಡು ವಾರಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಇತರ ಆರೋಪಿಗಳಿಗೆ ಜಾಮೀನು ನೀಡಿದ ಆದೇಶಗಳ ವಿರುದ್ಧವೂ ಮೇಲ್ಮನವಿಗಳಿರುವುದರಿಂದ, ದಸರಾ ಹಬ್ಬದ ಬಳಿಕ ಎಲ್ಲ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸುವಂತೆ ಕೋರಿದರು.
ಆದರೆ, ಸುಪ್ರೀಂ ಕೋರ್ಟ್ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಅಕ್ಟೋಬರ್ 27ಕ್ಕೆ ಮುಂದೂಡಿತು. ಅಂದು ವಿಚಾರಣೆಯನ್ನು ಮತ್ತೆ ಮುಂದೂಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಯೋಗೀಶ್ ಗೌಡ ಅವರು ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡರಾಗಿದ್ದರು. 2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್ನಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದು, ಕುಟುಂಬದ ಮನವಿಯ ಬಳಿಕ 2019ರಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.
ಸಿಬಿಐ ತನಿಖೆಯ ಬಳಿಕ ವಿನಯ್ ಕುಲಕರ್ಣಿ ಸೇರಿದಂತೆ ಹಲವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್ನಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ದೋಷಿಗಳೆಂದು ಘೋಷಿಸಿ, ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆ ವೇಳೆ ಕರ್ನಾಟಕ ಹೈಕೋರ್ಟ್ 2026ರ ಜುಲೈ 31ರಂದು ವಿನಯ್ ಕುಲಕರ್ಣಿ ಸೇರಿದಂತೆ ಹಲವು ಆರೋಪಿಗಳ ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು. ಇದೀಗ ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಗುರುನಾಥ್ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




