*ಚಳಿಗಾಲದ ಅಧಿವೇಶನಕ್ಕೆ ಸುವರ್ಣ ಸೌಧ ಸಜ್ಜು*: *ಪೂರ್ವಸಿದ್ಧತೆ ಪರಿಶೀಲಿಸಿದ ಸಭಾಪತಿ ಸಲೀಂ ಅಹ್ಮದ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆಗಳು ಭರದಿಂದ ಸಾಗಿದ್ದು, ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರು ಭಾನುವಾರ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ಸುವರ್ಣ ವಿಧಾನಸೌಧದಲ್ಲಿರುವ ಸಭಾಪತಿಗಳ ಕಚೇರಿ, ಸಭಾಂಗಣ ಹಾಗೂ ಬ್ಯಾಂಕ್ವೆಟ್ ಹಾಲ್ನಲ್ಲಿ ಕೈಗೊಂಡಿರುವ ವ್ಯವಸ್ಥೆಗಳನ್ನು ವೀಕ್ಷಿಸಿದ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಅಧಿವೇಶನದ ಸಂದರ್ಭದಲ್ಲಿ ಯಾವುದೇ ಲೋಪದೋಷಗಳು ಉಂಟಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಭಾಪತಿಗಳು, ಕಾರಿಡಾರ್ಗಳ ಸ್ವಚ್ಛತೆ, ಪ್ರಾಥಮಿಕ ಚಿಕಿತ್ಸಾ ಕೊಠಡಿ ಸೇರಿದಂತೆ ವಿವಿಧ ಮೂಲಸೌಕರ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಪ್ರತಿವರ್ಷದಂತೆ ಈ ಬಾರಿಯೂ ಅಚ್ಚುಕಟ್ಟಾಗಿ ವ್ಯವಸ್ಥೆಗಳನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಹಿರಿಯ ಅಧಿಕಾರಿ ಬಲರಾಮ್ ಚವಾಣ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಹುಲಜಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ. ಗಡಾದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



