*ಚಳಿಗಾಲ ಅಧಿವೇಶನಕ್ಕೆ ಸುವರ್ಣ ವಿಧಾನಸೌಧ ಸಜ್ಜು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸೆಂಬರ್ 2ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗುರುವಾರ (ನ.19) ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.
ಈ ವೇಳೆ ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸುವರ್ಣ ವಿಧಾನಸೌಧದ ಮಧ್ಯಮ ಕೊಠಡಿ, ಬ್ಯಾಂಕ್ವೆಟ್ ಹಾಲ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಆಸನ ವ್ಯವಸ್ಥೆ, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸೂಚಿಸಿದರು. ಕಟ್ಟಡದ ಪ್ರತಿಯೊಂದು ಭಾಗದಲ್ಲೂ ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ವಿದ್ಯುತ್ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸುವುದರ ಜತೆಗೆ ಲಿಫ್ಟ್ಗಳು ಸೇರಿದಂತೆ ಇತರೆ ಸೌಲಭ್ಯಗಳ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದರು.
ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು, ಅಧಿಕಾರಿಗಳು, ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು ಹಾಗೂ ಮಾರ್ಷಲ್ಗಳಿಗೆ ಊಟ ಮತ್ತು ಅಗತ್ಯ ಸೌಲಭ್ಯಗಳ ವ್ಯವಸ್ಥೆ ಮಾಡಬೇಕು. ಮಹಿಳಾ ಶಾಸಕರು, ಸಚಿವರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಬಳಸುವ ಶೌಚಾಲಯಗಳ ಸ್ವಚ್ಛತೆಗೆ ವಿಶೇಷ ಗಮನಹರಿಸಬೇಕು ಎಂದು ತಿಳಿಸಿದರು.
ಅಧಿವೇಶನದ ಸಂದರ್ಭದಲ್ಲಿ ಭದ್ರತೆ ಮತ್ತು ಸಂಚಾರ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ವಾಹನಗಳ ಸುಗಮ ಸಂಚಾರ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ಸೂಕ್ತ ಯೋಜನೆ ರೂಪಿಸಿ, ಅಗತ್ಯ ಸ್ಥಳಗಳಲ್ಲಿ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಅಧಿವೇಶನ ಆರಂಭಕ್ಕೂ ಮುನ್ನ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಿ, ಯಾವುದೇ ಲೋಪದೋಷಗಳಿಗೆ ಅವಕಾಶವಾಗದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ ಸೇರಿದಂತೆ ಲೋಕೋಪಯೋಗಿ, ಹೆಸ್ಕಾಂ, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


