
ಪ್ರಗತಿವಾಹಿನಿ ಸುದ್ದಿ: ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.
ಮೃತರನ್ನು ಗಾನವಿ (20) ಹಾಗೂ ವೈಷ್ಣವಿ (20) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ವಿದ್ಯಾರ್ಥಿಗಳು ಹಾಸನದಿಂದ ಬೆಂಗಳೂರಿನತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಾರ್ಗಮಧ್ಯೆ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಗಾನವಿ ಹಾಗೂ ವೈಷ್ಣವಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದಲ್ಲಿ ಗಾಯಗೊಂಡ ನಾಲ್ವರ ಸ್ಥಿತಿಯೂ ಗಂಭೀರವಾಗಿದ್ದು, ಇಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಇಬ್ಬರಿಗೆ ನೆಲಮಂಗಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ನಿದ್ದೆ ಮಂಪರೇ ಅಪಘಾತಕ್ಕೆ ಕಾರಣವೇ?
ಚಾಲಕನಿಗೆ ನಿದ್ದೆ ಮಂಪರು ಆವರಿಸಿದ್ದರಿಂದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ವಿದ್ಯಾರ್ಥಿನಿಯರ ಸಂಪೂರ್ಣ ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಸಂಬಂಧ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


