Belagavi NewsBelgaum NewsKannada NewsKarnataka News

*”ಕಾಯಕ ಗ್ರಾಮ” ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ*

ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಕ್ರಮವಹಿಸಿ: ರಾಹುಲ್ ಶಿಂಧೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉಗಾರ ಬಿ.ಕೆ. ಗ್ರಾಮ ಪಂಚಾಯತಿ 2025-2026ನೇ ಸಾಲಿನಲ್ಲಿ ಶೇ.100 ರಷ್ಟು ತೆರಿಗೆ ವಸೂಲಾತಿ ಮಾಡಿದ್ದು, ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿ ಈ ಅನುದಾನ ಸದ್ಬಳಕೆಯಾಗಲಿ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.

Home add -Advt

ಕಾಗವಾಡ ತಾಲೂಕಿನ ಉಗಾರ ಬಿ.ಕೆ. ಗ್ರಾಮದ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಗ್ರಾಮ ಪಂಚಾಯತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ “ಕಾಯಕ ಗ್ರಾಮ” ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರು, ಗ್ರಂಥಾಲಯ, ಅಂಗನವಾಡಿ, ಕೂಸಿನಮನೆ ಕೇಂದ್ರ  ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೇ ರೀತಿ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಗ್ರಾಮ ಪಂಚಾಯತಿಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವುದು “ಕಾಯಕ ಗ್ರಾಮ” ಕಾರ್ಯಕ್ರಮದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಆಯ್ಕೆ ಮಾಡಲಾಗಿರುವ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ, ಗ್ರಾಮಗಳ ಅಭಿವೃದ್ಧಿಗೆ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ಶಾಲಾ ಮಕ್ಕಳೊಂದಿಗೆ ಸಂವಾದ


ಇದಕ್ಕೂ ಮುನ್ನ ಇಲ್ಲಿನ ಶಾಸಕರ ಮಾದರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಗೆ ಭೇಟಿ ನೀಡಿದ ಸಿಇಒ ಅವರು ಮಕ್ಕಳೊಂದಿಗೆ ಸಂವಾದ ನಡೆಸಿದರು. ಸ್ಮಾರ್ಟ್ ತರಗತಿ ಹಾಗೂ 7 ತರಗತಿ ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆಗಳನ್ನು ಪರಿಶೀಲಿಸಿದರು. ಇದೇ ವೇಳೆ ಗಣಿತ ಲೆಕ್ಕ ಬಿಡಿಸಿದ ಮಕ್ಕಳಿಗೆ ಹೂವು ನೀಡಿ ಅಭಿನಂದಿಸಿದರು.

ಕೂಸಿನ ಮನೆಗೆ ಭೇಟಿ


ಬಳಿಕ ಕೂಸಿನ ಮನೆ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿದರು. ಆರೈಕೆದಾರರಿಗೆ ಮಕ್ಕಳ ಬಗ್ಗೆ ಕಾಳಜಿ ವಹಿಸುವಂತೆ ಸೂಚನೆ ನೀಡಿದರು.


ಎನ್.ಆರ್.ಎಲ್.ಎಂ. ಸಂಜೀವಿನಿ ಒಕ್ಕೂಟದ ಕಾರ್ಯಾಲಯ ವೀಕ್ಷಣೆ ಮಾಡಿದರು. ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಆಹಾರ ಪದಾರ್ಥ, ಕರಕುಶಲ ವಸ್ತುಗಳನ್ನು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸನ್ಮಾನ:
2025-26ನೇ ಸಾಲಿನಲ್ಲಿ ಕಾಗವಾಡ ತಾಲೂಕಿನ ಎಲ್ಲ 8 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಶೇ.100 ರಷ್ಟು ಕರ ವಸೂಲಾತಿ ಮಾಡಿ  ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯಲು ಕಾರಣರಾದ ತಾಲೂಕಿನ ಎಲ್ಲ ಪಂಚಾಯತ ಅಭಿವೃದ್ಧಿ ಅಧಿಕಾರಿಗಳನ್ನು ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು.

ನಂತರ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು ಹಾಗೂ ಅಗತ್ಯ ಯೋಜನೆ ರೂಪಿಸಿ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪನವರ್,  ಕಾಗವಾಡ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ, ಅಥಣಿ  ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಸಹಾಯಕ ನಿರ್ದೇಶಕರಾದ ಎ ಡಿ. ಅನ್ಸಾರಿ, ಶಿವಾನಂದ ಸನಾಳ, ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗಪ್ಪ ಕಾಂಬಳೆ ವಿವಿಧ ಇಲಾಖೆಯ ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Related Articles

Back to top button