
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಸರಕಾರ ಶಾಕ್ ನೀಡಿದೆ. ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಹೊಸ ಸುತ್ತೋಲೆಯೊಂದನ್ನು ಹೊರಡಿಸಲಾಗಿದ್ದು, 2020 -21ನೇ ಸಾಲಿಗೆ ಅನ್ವಯವಾಗಲಿದೆ.
ಹೊಸದಾಗಿ ಯಾವುದೇ ಶಿಕ್ಷಣ ಸಂಸ್ಥೆಗಳನ್ನು ವೇತನಾನುದಾನಕ್ಕೆ ಒಳಪಡಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ. ಜೊತೆಗೆ ನಿವೃತ್ತಿ, ರಾಜಿನಾಮೆ ಅಥವಾ ನಿಧನ ಸೇರಿದಂತೆ ಯಾವುದೇ ಕಾರಣದಿಂದ ಖಾಲಿಯಾಗಿರುವ ಹುದ್ದೆಗಳನ್ನು ಈ ವರ್ಷ ಭರ್ತಿಮಾಡಿಕೊಳ್ಳುವಂತಿಲ್ಲ ಎಂದು ತಿಳಿಸಲಾಗಿದೆ.
ಈಗಾಗಲೆ ಹಣಕಾಸು ಇಲಾಖೆ ಅನುಮತಿ ನೀಡಿದ್ದರೂ ಸಹ ಅಂತಹ ನೇಮಕಾತಿಯನ್ನು ತಡೆಹಿಡಿಯುವಂತೆ ತಿಳಿಸಲಾಗಿದೆ. ಇದು ಎಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಮತ್ತು ವಸತಿ ನಿಲಯಗಳಿಗೆ ಅನ್ವಯವಾಗಲಿದೆ.
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸಂಕಷ್ಟದಲ್ಲಿದೆ. ಹಾಗಾಗಿ ಸಾಕಷ್ಟು ಮಿತವ್ಯಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.