
500 ಕೋಟಿ ಕಿಕ್ ಬ್ಯಾಕ್ ಆರೋಪ: ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣದ ಸಂಕಷ್ಟದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 500 ಕೋಟಿ ಕಿಕ್ ಬ್ಯಾಕ್ ಪಡೆದಿರುವ ಆರೋಪದಲ್ಲಿ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
8 ಗಣಿ ಗುತ್ತಿಗೆ ನವೀಕರಣದಲ್ಲಿ ಸಿಎಂ ಸಿದ್ದರಾಮಯ್ಯ 2015ರಲ್ಲಿ ಸಿಎಂ ಆಗಿದ್ದಾಗ 500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ಪತ್ರಬರೆದು, ಈ ಬಗ್ಗೆ ತನಿಖೆ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರು 2015ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಅಲ್ಲದೇ ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪನಿಗಳ ಹಲವು ವರ್ಷಗಳಿಂದ ಬಾಕಿ ಇದ್ದ ಲೈಸನ್ಸ್ ಕೂಡ ನವೀಕರಣ ಮಾಡಲು ಅನುಮತಿ ನೀಡಿದ್ದರು. ಹೀಗೆ ನವೀಕರಣ ಮಾಡಿಕೊಟ್ಟಿದ್ದಕ್ಕೆ ಸಿದ್ದರಾಮಯ್ಯ ಸುಮಾರು 500 ಕೋಟಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ತನಿಖೆಗೆ ನಿರ್ದೇಶಿಸಿ ಅನುಮತಿ ನೀಡುವಂತೆ ದೂರಿನಲ್ಲಿ ತಿಳಿಸಲಾಗಿದೆ.