Belagavi NewsBelgaum NewsKannada NewsKarnataka News

*ರಾಜ್ಯದಲ್ಲಿ ಹವಾಮಾನ ಬದಲಾವಣೆ:  ಮಳೆ, ಚಳಿ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯಿಂದ ಬೀಸುತ್ತಿರುವ ಮಾರುತಗಳು ಹಾಗೂ ಉತ್ತರ ಭಾರತದ ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯದ ಹಿಂಗಾರು ಮಳೆಯ ಮೇಲೆ ಪರಿಣಾಮ ಉಂಟಾಗಿದೆ. ಇದರ ನಡುವೆಯೇ ನವೆಂಬರ್ 8ರ ಬಳಿಕ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಇಂದು ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗಳಲ್ಲಿಯೂ ಮಳೆಯ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆಯಾಗಬಹುದು. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಸಕಲೇಶಪುರ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಶಿವಮೊಗ್ಗ ಸೇರಿದಂತೆ ಇತರೆ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ.

ಆದರೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆಯ ಸಾಧ್ಯತೆ ಕಡಿಮೆ ಇದೆ. ಉತ್ತರ ಭಾರತದಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮವಾಗಿ ಈ ಭಾಗದಲ್ಲಿ ಮುಂದಿನ ದಿನಗಳಲ್ಲಿಯೂ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಇನ್ನು ನವೆಂಬರ್ 6ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ. ನವೆಂಬರ್ 8ರ ವೇಳೆಗೆ ಮಳೆಯ ಚಟುವಟಿಕೆ ಬಹುತೇಕ ತಗ್ಗಲಿದ್ದು, ತೇವಾಂಶಭರಿತ ಗಾಳಿ ಕೇರಳ ಮತ್ತು ತಮಿಳುನಾಡಿನತ್ತ ಚಲಿಸುವ ನಿರೀಕ್ಷೆಯಿದೆ. ಇದರಿಂದ ರಾಜ್ಯದ ವಾತಾವರಣದಲ್ಲಿ ಬದಲಾವಣೆಯಾಗಿ ಚಳಿಯ ಪ್ರಮಾಣ ಹೆಚ್ಚಾಗಬಹುದು.

ಸದ್ಯ ಬಂಗಾಳಕೊಲ್ಲಿಯಲ್ಲಿ ಹೊಸ ವಾಯುಭಾರ ಕುಸಿತ ಉಂಟಾಗುವ ಸ್ಪಷ್ಟ ಮುನ್ಸೂಚನೆ ಇಲ್ಲದಿರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮಳೆಯ ಚಟುವಟಿಕೆ ಮತ್ತಷ್ಟು ಕ್ಷೀಣಿಸುವ ಸಾಧ್ಯತೆಯಿದೆ.

Related Articles

Back to top button