*ಬೆಳಗಾವಿಯಲ್ಲಿ ನಡೆಯುವ ಟ್ಯಾಲೆಂಟ್ ಸರ್ಚ್ ಪರೀಕ್ಷೆ ರಾಜ್ಯಕ್ಕೆ ಮಾದರಿ: ಸಚಿವ ಮಧು ಬಂಗಾರಪ್ಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯಲ್ಲಿ ನಡೆಸಲಾಗುತ್ತಿರುವ ಪ್ರತಿಭಾನ್ವೇಷಣೆ ಪರೀಕ್ಷೆಯು ರಾಜ್ಯದಲ್ಲಿ ಮಾದರಿಯಾಗಿದ್ದು, ಇದೇ ರೀತಿ ರಾಜ್ಯಮಟ್ಟದಲ್ಲಿ ವಿವಿಧ ಹಂತಗಳಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆ (ಟ್ಯಾಲೆಂಟ್ ಸರ್ಚ್ ಪರೀಕ್ಷೆ) ಏರ್ಪಡಿಸಲು ಯೋಜನೆ ರೂಪಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ, ಚಿಕ್ಕೋಡಿ ಇವರ ಸಂಯುಕ್ತಾಶ್ರಯದಲ್ಲಿ ಸುವರ್ಣ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ (ಡಿ.17) ನಡೆದ ಪ್ರತಿಭಾನ್ವೇಷಣೆ ಪರೀಕ್ಷೆ-2025ರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಂದೆ ತಾಯಿಗಳ ಆಶಯದಂತೆ ಮಕ್ಕಳು ದೇಶಕ್ಕೆ ಕೊಡುಗೆ ನೀಡಲು ಮುಂದಾಗಬೇಕು. ಪ್ರತಿಭಾನ್ವೇಷಣೆ ಪರೀಕ್ಷೆ ಕೇವಲ ಜಿಲ್ಲೆಗೆ ಸೀಮಿತವಾಗದೆ ರಾಜ್ಯ ಮಟ್ಟದಲ್ಲಿ ಪ್ರತಿ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪರೀಕ್ಷೆ ಆಯೋಜಿಸಲಾಗುವುದು ಇದರಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಂತಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು,
ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಪ್ರತಿ ವರ್ಷ ಪ್ರತಿಭಾನ್ವೇಷಣೆ ಪರೀಕ್ಷೆ ಆಯೋಜಿಸುತ್ತಿರುವುದು ಉತ್ತಮ ನಡೆ. ಮಕ್ಕಳು ದೇವರ ಸಮ. ಮುಂದಿನ ದಿನಗಳಲ್ಲಿ ಮಕ್ಕಳು ಹೆಚ್ಚು ಹೆಚ್ಚು ಪರೀಕ್ಷೆಗಳಲ್ಲಿ ಪಾಲ್ಗೊಳ್ಳಬೇಕು. “ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ” ಎಂದು ಸ್ವಾಮಿ ವಿವೇಕಾನಂದರು” ಹೇಳಿದ್ದಾರೆ ಎಂದು ತಿಳಿಸಿದರು.
ಎನ್.ಎಸ್.ಭೋಜೆಗೌಡ ಅವರು ಮಾತನಾಡಿ, ಪ್ರತಿಭೆ ಎನ್ನುವುದು ಪ್ರತಿಯೊಬ್ಬರಲ್ಲೂ ಇರುತ್ತದೆ. ಮಕ್ಕಳಲ್ಲಿನ ಫ್ರತಿಭೆಯನ್ನು ಗುರುತಿಸುವ ಕಾರ್ಯವು ಶಾಲಾ ಶಿಕ್ಷಕರ ಹಾಗೂ ಪಾಲಕರ ಜವಾಬ್ದಾರಿಯಾಗಿದೆ ಎಂದರು. ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಅದನ್ನು ಹೊರ ತೆಗೆದಲ್ಲಿ ಸಮಾಜಕ್ಕೆ ಅತ್ಯಮೂಲ್ಯ ಕೊಡುಗೆಯನ್ನು ನೀಡಿದಂತಾಗುತ್ತದೆ. ಸರಕಾರಿ ಶಾಲೆಗಳಲ್ಲಿ ವ್ತಾಸಂಗಮಾಡುವ ಕಿಳರಿಮೆ ಹೊಂದ ಬಾರದು. ಸರಕಾರಿ ಶಾಲೆಗಳಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವುದರ ಮೂಲಕ ಸ್ವಾಸ್ಥ್ಯ ಸಮಾಜ ಕಟ್ಟಲು ಮುಂದಾಗಬೇಕು ಎಂದರು.
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅವರು, ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ಮುಂಚೆ ನಿರಂತರ ವಿದ್ಯಾಭ್ಯಾಸ ಮಾಡಿ ಸಿದ್ಧತೆ ಮಾಡಿಕೊಳ್ಳಬೇಕು. ಅತಿ ಹೆಚ್ಚು ಅಂಕ ಗಳಿಸಿ ತಂದೆ ತಾಯಿಗಳಿಗೆ ಹೆಮ್ಮೆಯ ಮಕ್ಕಳಾಗಬೇಕು ಎಂಬುದು ನಿಮ್ಮ ಮೊದಲ ಗುರಿಯಾಗಬೇಕು. ಪ್ರತಿ ದಿನ ಒಂದೊಂದು ವಿಷಯಗಳನ್ನು ದಿನಚರಿಯಲ್ಲಿ ಅಭ್ಯಾಸದ ರೂಢಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಳೆದ ವರ್ಷ ಪ್ರತಿಭಾನ್ವೇಷಣೆ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳು ಅನುಕೂಲವಾದ ಫಲಿತಾಂಶ ತೆಗೆದುಕೊಂಡ ಬಳಿಕ ಈ ವರ್ಷ ಕೂಡ ಪ್ರತಿಭಾನ್ವೇಷಣೆ ಪರೀಕ್ಷೆ ನಡೆಸಲಾಯಿತು.
ಸಿಇಟಿ, ಕೆಪಿಎಸ್.ಸಿ, ಐಪಿಎಸ್.ಸಿ, ಸೇರಿದಂತೆ ಇನ್ನೂ ಅನೇಕ ಪರೀಕ್ಷೆಗಳನ್ನು ಎದುರಿಸಲು ಈಗಿನಿಂದಲೇ ಈ ಪರೀಕ್ಷೆಗಳು ಸಹಾಯವಾಗಲಿವೆ. ಮಕ್ಕಳನ್ನು ಹೆಚ್ಚು ಪರೀಕ್ಷೆಗಳಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಲೀಲಾವತಿ ಹಿರೇಮಠ, ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ 52 ಸಾವಿರ ವಿದ್ಯಾರ್ಥಿಗಳಲ್ಲಿ 122 ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದುಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಗುಣಾತ್ಮಕ ಶಿಕ್ಷಣ, ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ ಪ್ರತಿಭಾನ್ವೇಷಣೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಅಭಿನಂದನಾ ಪತ್ರ ವಿತರಣೆ
ಇದೇ ಸಂದರ್ಭದಲ್ಲಿ ಪ್ರತಿಭಾನ್ವೇಷಣೆ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಚಿಕ್ಕೋಡಿ ಹಾಗೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.
ಚಿಕ್ಕೋಡಿ ಸದಲಗಾ ವಿಧಾನ ಸಭಾ ಕ್ಷೇತ್ರದ ಶಾಸಕ ಗಣೇಶ ಹುಕ್ಕೇರಿ, ಬೈಲಹೊಂಗಲ ಶಾಸಕರು, ಕರ್ನಾಟಕ ಸರ್ಕಾರ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ,, ರಮೇಶ್ ಬಾಬು, ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು, ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

