*ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 4.71 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಜೂನ್ 28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಈಶ್ವರ ಗಡಾದಿ ತಿಳಿಸಿದ್ದಾರೆ.
ಭಾರತವು ಪೋಲಿಯೋ ಮುಕ್ತ ರಾಷ್ಟ್ರವಾಗಿ 15 ಕ್ಕೂ ಹೆಚ್ಚು ವರ್ಷಗಳು ಕಳೆದಿದ್ದರೂ, ನೆರೆಯ ರಾಷ್ಟ್ರಗಳಲ್ಲಿ ಇತ್ತೀಚೆಗೆ ಪೋಲಿಯೋ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೇಶಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜೂನ್ 28 ರಂದು ಮೊದಲನೇ ದಿನ ಜಿಲ್ಲೆಯಾದ್ಯಂತ ನಿರ್ದಿಷ್ಟಪಡಿಸಿದ ಪೋಲಿಯೋ ಬೂತ್‌ಗಳಲ್ಲಿ ಲಸಿಕೆ ಹಾಕಲಾಗುತ್ತದೆ. ಬೂತ್‌ಗಳಿಗೆ ಬರಲು ಸಾಧ್ಯವಾಗದ ಮಕ್ಕಳಿಗಾಗಿ ಮುಂದಿನ 2 ರಿಂದ 3 ದಿನಗಳ ಕಾಲ ಲಸಿಕಾ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಿದ್ದಾರೆ.
ವಲಸಿಗ ಸಮುದಾಯದ ಮಕ್ಕಳು, ಇಟ್ಟಿಗೆ ಭಟ್ಟಿ, ಕಟ್ಟಡ ಕಾಮಗಾರಿ ಪ್ರದೇಶಗಳು, ತೋಟದ ಮನೆಗಳು, ಗುಡ್ಡಗಾಡು ಪ್ರದೇಶಗಳು ಹಾಗೂ ನಗರದ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ಅಭಿಯಾನದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಯಾವುದೇ ಮಗುವೂ ಲಸಿಕೆಯಿಂದ ವಂಚಿತರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಅಂಗನವಾಡಿ ಕೇಂದ್ರಗಳು ಮಾತ್ರವಲ್ಲದೆ, ಪ್ರಯಾಣದಲ್ಲಿರುವ ಮಕ್ಕಳಿಗಾಗಿ ರೈಲ್ವೇ ಸ್ಟೇಷನ್‌ಗಳು, ಬಸ್ ನಿಲ್ದಾಣಗಳು ಹಾಗೂ ಏರ್‌ಪೋರ್ಟ್‌ಗಳಲ್ಲಿಯೂ ಸಹ ವಿಶೇಷ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ.
ಅಭಿಯಾನದ ಯಶಸ್ಸಿಗಾಗಿ ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ಇಲಾಖೆಗಳ ಸಮನ್ವಯ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ವಿವಿಧ ಸಹಕಾರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಬೆಳಗಾವಿ ಜಿಲ್ಲೆಯ ಲಸಿಕಾ ಅಭಿಯಾನದ ಅಂಕಿ-ಅಂಶಗಳು
ಜಿಲ್ಲೆಯಲ್ಲಿ ಅಭಿಯಾನದ ವ್ಯವಸ್ಥಿತ ನಿರ್ವಹಣೆಗಾಗಿ ಒಟ್ಟು 2,331 ಪೋಲಿಯೋ ಬೂತ್‌ಗಳನ್ನು ಸ್ಥಾಪಿಸಲಾಗಿದೆ. ದೂರದ ಮತ್ತು ತಲುಪಲು ಕಷ್ಟವಿರುವ ಪ್ರದೇಶಗಳಿಗಾಗಿ 49 ಸಂಚಾರಿ (ಮೊಬೈಲ್) ತಂಡಗಳನ್ನು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ 74 ಟ್ರಾನ್ಸಿಟ್ ತಂಡಗಳನ್ನು ರಚಿಸಲಾಗಿದೆ. ಲಸಿಕಾ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ 618 ಮೇಲ್ವಿಚಾರಕರನ್ನು ನೇಮಿಸಲಾಗಿದ್ದು, ಒಟ್ಟು 9,514 ಲಸಿಕಾ ಕಾರ್ಯಕರ್ತರು ಬೃಹತ್ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ.
“ಪೋಲಿಯೋ ಮುಕ್ತ ಭಾರತ, ಪೋಲಿಯೋ ಮುಕ್ತ ಕರ್ನಾಟಕ” ಎಂಬ ಧ್ಯೇಯದೊಂದಿಗೆ ನಡೆಯುತ್ತಿರುವ ಅಭಿಯಾನದಲ್ಲಿ 5 ವರ್ಷದೊಳಗಿನ ತಮ್ಮ ಎಲ್ಲಾ ಮಕ್ಕಳಿಗೆ ತಪ್ಪದೇ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸಿ ಪೋಷಕರು ಸಹಕರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಈಶ್ವರ ಗಡಾದಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




