ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಆಮಂತ್ರಣ ಪತ್ರಿಕೆಯಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳ ಹೆಸರನ್ನು ಹಾಕದೇ ಇರುವ ಕ್ರಮವನ್ನು ಪ್ರತಿಭಟಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸೇರಿದಂತೆ ವಿವಿಧ ಶಿಕ್ಷಕರ ಸಂಘಗಳು ಬೆಳಗಾವಿಯಲ್ಲಿ ಶನಿವಾರ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಬಹಿಷ್ಕರಿಸಿ ಪ್ರತಿಭಟಿಸಿದವು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಯಕುಮಾರ ಹೆಬಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಶಿಕ್ಷಕರ ಸಂಘಟನೆಗಳ ಹೆಸರನ್ನು ಆಮಂತ್ರಣ ಪತ್ರಿಕೆಗಳಲ್ಲಿ ಹಾಕಲಾಗುತ್ತದೆ. ಆದರೆ ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಮಾನ್ಯತೆ ಪಡೆದ ಸಂಘಟನೆಗಳ ಹೆಸರು ಹಾಕದೆ ಮತ್ತು ವೇದಿಕೆಯಲ್ಲಿ ಖಾಲಿ ಖುರ್ಚಿ ಬಿಟ್ಟು ಅವಮಾನ ಮಾಡಲಾಗಿದೆ. ಸಂಬಂಧಿಸಿದವರು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನೆಕಾರರು ಆಗ್ರಹಿಸಿದರು.
ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ರಾಮು ಗುಗವಾಡ, ಬೆಳಗಾವಿ ಜಿಲ್ಲಾಧ್ಯಕ್ಷ ಎಸ್.ಎಸ್.ಬಳಿಗಾರ, ಉಪಾಧ್ಯಕ್ಷ ಅಶೋಕ ಅಣ್ಣಿಗೇರಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಗಾಣಿಗೇರ, ಮುಖ್ಯಾಧ್ಯಾಪಕರ ಸಂಘದ ಅಧ್ಯಕ್ಷ ಎಸ್.ಎಸ್.ಮಠದ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಜಯಕುಮಾರ ಹೆಬಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ