ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಜಾಗೃತಿ ಮೂಡಿಸಲು ಬೆಂಗಳೂರಿನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಅಂಶ ಆರೋಪಿಗಳ ವಿಚಾರಣೆ ವೇಳೆ ಬೆಳಕಿಗೆ ಬಂದಿದ್ದು, ಇದೀಗ ರಾಜಕೀಯ ನಾಯಕರ ಪರಸ್ಪರ ಆರೋಪ-ಪ್ರತ್ಯಾರೋಪಗಳು ಕೂಡ ಆರಂಭವಾಗಿದೆ.
ತಮ್ಮ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ತೇಜಸ್ವಿ ಸೂರ್ಯ, ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆ ಬ್ಯಾನ್ ಆಗಬೇಕು. ಈ ಸಂಘಟನೆ ಪರ ವಕಾಲತ್ತು ವಹಿಸಿಕೊಂಡು ಬರುವ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಮಾತನಾಡಲಿ ಎಂದು ಆಗ್ರಹಿಸಿದ್ದಾರೆ.
ಡಿ.೨೨ರಂದು ಸಿಎಎ ಜಾಗೃತಿ ಜಾಥಾ ಕಾರ್ಯಕ್ರಮದ ವೇಳೆ ಚಕ್ರವರ್ತಿ ಸೂಲಿಬೆಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎಸೆದಿದ್ದರು. ಅದೃಷ್ಟವಶಾತ್ ಅವರಿಗೆ ತಗುಲಿರಲಿಲ್ಲ ಆದರೆ ನಮ್ಮ ಕಾರ್ಯಕರ್ತರಿಗೆ ತಗುಲಿದೆ. ಈ ಘಟನೆಗಳ ಬಗ್ಗೆ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದಾಗಲೂ ಅವರ ಗಮನಕ್ಕೆ ತರುತ್ತೇನೆ ಹಾಗೂ ಈ ಸಂಘಟನೆಗಳು ಬ್ಯಾನ್ ಮಾಡುವ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಆಗ್ರಹ ಮಾಡುತ್ತೇನೆ. ಸಂಸತ್ನಲ್ಲಿಯೂ ಈ ಬಗ್ಗೆ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದರು.
ಡಿ. 22ರಂದು ಬೆಂಗಳೂರಿನ ಟೌನ್ಹಾಲ್ ಬಳಿ ಸಿಎಎ ಜಾಗೃತಿ ಜಾಥಾ ನಡೆದಿತ್ತು. ಈ ವೇಳೆ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆಹತ್ಯೆಗೆ ಸ್ಕೆಚ್ ಹಾಕಲಾಗಿತ್ತು. ಜಾಥಾ ಮುಗಿಸಿ ತೆರಳುವಾಗ ಆರ್ಎಸ್ಎಸ್ ಕಾರ್ಯಕರ್ತ ವರುಣ್ ಮೇಲೆ ಜೆ.ಸಿ ನಗರದ ರಸ್ತೆಯಲ್ಲಿ 6 ಜನ ಎಸ್ಡಿಪಿಐ ಕಾರ್ಯಕರ್ತರಿಂದ ಕೊಲೆಗೆ ಯತ್ನ ನಡೆದಿತ್ತು.
ಪ್ರಕರಣ ಸಂಬಂಧ ಇರ್ಫಾನ್, ಸೈಯದ್ ಅಕ್ಬರ್, ಸೈಯದ್ ಸಿದ್ಧಿಕ್, ಅಕ್ಬರ್ ಪಾಷಾ, ಸನಾ ಹಾಗೂ ಸಾಧಿಕ್ ಉಲ್ ಅಮೀನ್ ಎಂಬ ಎಸ್‍ಡಿ ಪಿಐ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಆರೋಪಿಗಳ ವಿಚಾರಣೆಯ ವೇಳೆ ವರುಣ್ ಮೇಲೆ ಹಲ್ಲೆಗೆ ವೈಯಕ್ತಿಕ ಕಾರಣವೇ ಇಲ್ಲ. ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯನ್ನು ಹತ್ಯೆ ಮಾಡುವುದು ನಮ್ಮ ಮುಖ್ಯ ಉದ್ದೇಶವಾಗಿತ್ತು ಎಂದು ತಪ್ಪೊಪ್ಪಿಕೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ