Kannada NewsKarnataka NewsLatestNationalPolitics

*ಬಿಜೆಪಿ ಜನಾಕ್ರೋಶ ಯಾತ್ರೆಗೆ ಕೇಂದ್ರ ಸರಕಾರ ಬಿಗ್ ಶಾಕ್!*

ಪ್ರಗತಿವಾಹಿನಿ ಸುದ್ದಿ: ಕೇಂದ್ರದ ಭಾರತೀಯ ಜನತಾ ಪಕ್ಷದ ಸರಕಾರ ಒಂದೇ ದಿನ ಜನತೆಗೆ ಡಬಲ್ ಶಾಕ್ ನೀಡಿದೆ. ಪೆಟ್ರೋಲ್ ದರ ಹೆಚ್ಚಿಸಿದ ಕೆಲವೇ ಕ್ಷಣಗಳಲ್ಲಿ ಸಿಲೆಂಡರ್ ದರವನ್ನೂ ಹೆಚ್ಚಿಸುವ ಮೂಲಕ ಜನರ ಆಕ್ರೋಶಕ್ಕೆ ಗುರಿಯಾಗಿದೆ.

ಇದರಿಂದಾಗಿ ರಾಜ್ಯ ಸರಕಾರದ ಬೆಲೆ ಏರಿಕೆ ವಿರುದ್ಧ ಈಗಷ್ಟೇ ಜನಾಕ್ರೋಶ ಯಾತ್ರೆ ಆರಂಭಿಸಿದ ಬಿಜೆಪಿಗೆ ಹಿನ್ನಡೆಯಾಗಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಅದರಲ್ಲಿಯೂ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದೆ.

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಗೆ 2 ರೂಪಾಯಿ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಪೆಟ್ರೋಲ್, ಡೀಸೆಲ್ ದರ ಭಾರಿ ಏರಿಕೆಯಾಗಲಿದೆ.

Home add -Advt

ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಲೀಟರ್ ಗೆ 2 ರೂಪಾಯಿ ಹೆಚ್ಚಳ ಮಾಡಿದ್ದ ಕೇಂದ್ರ ಸರ್ಕಾರ ಕೆೆಲವೇ ಕ್ಷಣಗಳಲ್ಲಿ ದೇಶದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬರೆ ಎಳೆದಿದೆ.

ಪೆಟ್ರೋಲ್, ಡೀಸೆಲ್ ಸುಂಕ ಹೆಚ್ಚಲ ಬೆನ್ನಲ್ಲೇ ಅಡುಗೆ ಅನಿಲ ದರವನ್ನು ಹೆಚ್ಚಳ ಮಾಡಿದೆ. ಮಾತ್ರವಲ್ಲ ಉಜ್ವಲ ಯೋಜನೆ ಅಡಿ ಸಿಗುವ ಸಿಲಿಂಡರ್ ದರದಲ್ಲಿಯೂ ಏರಿಕೆಯಾಗಿದೆ.

ಅಡುಗೆ ಅನಿಲ ದರ 50 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅಲ್ಲದೇ ಉಜ್ವಲ ಯೋಜನೆ ಸಿಲಿಂಡರ್ ದರವನ್ನು ಕೂಡ 50 ರೂಪಾಯಿ ಹೆಚ್ಚಿಸಲಾಗಿದೆ. ಈ ಮೂಲಕ ಉಜ್ವಲ ಯೋಜನೆ ಅಡಿಯ ಸಿಲಿಂಡರ್ ದರ ಇನ್ಮುಂದೆ 550 ರೂಪಾಯಿ ಆಗಲಿದೆ.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿತ್ತು. ಇದರ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಸಿಲೆಂಡರ್ ದರವನ್ನೂ ಹೆಚ್ಚಳ ಮಾಡಿದೆ.

ಬಿಜೆಪಿ ಜನಾಕ್ರೋಶ ಯಾತ್ರೆ ಆರಂಭದ ದಿನವೇ ಅವರದೇ ಪಕ್ಷದ ಕೇಂದ್ರ ಸರಕಾರ ನೀಡಿದ ಶಾಕ್ ನಿಂದ ಬಿಜೆಪಿ ಕಂಗೆಟ್ಟಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಪ್ರಕಟಣೆ

ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ.
ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಯೇ ಕಾರಣ ಎಂದು ನಾವು ಹೇಳುತ್ತಲೇ ಬಂದಿರುವ ಸತ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರೇ ದೇಶದ ಜನರ ಮುಂದೆ ಬಿಚ್ಚಿಟ್ಟು ಒಪ್ಪಿಕೊಂಡಿದ್ದಾರೆ.

ಈಗ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ತೆರಿಗೆಯನ್ನು ಎರಡು ರೂಪಾಯಿಗಳಷ್ಟು ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50 ರೂಪಾಯಿಯಷ್ಟು ಏರಿಕೆ ಮಾಡಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು ಎಂಬುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಇಳಿಯುತ್ತಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಒಂದೇ ಸಮನೆ ಏರಿಸುತ್ತಾ ಹೋಗಲು ಕಾರಣ ಏನು ಎಂಬುದನ್ನು ಬಿಜೆಪಿ ನಾಯಕರು ರಾಜ್ಯದ ಜನರಿಗೆ ತಿಳಿಸಬೇಕು.

ಅಕ್ಕಿ, ಬೇಳೆ, ಮೀನು, ಮಾಂಸ, ತರಕಾರಿಯಿಂದ ಹಿಡಿದು ಹೊಟೇಲ್ ತಿಂಡಿ ವರೆಗೆ ಎಲ್ಲದರ ಬೆಲೆ ಏರಿಕೆಗೆ ಮೂಲ ಕಾರಣ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುತ್ತಲೇ ಇರುವ ಕೇಂದ್ರ ಸರ್ಕಾರದ ಜನವಿರೋಧೀ ನೀತಿ ಎನ್ನುವುದು ಆರ್ಥಿಕ ವ್ಯವಹಾರದ ಸಾಮಾನ್ಯ ಜ್ಞಾನ ಇದ್ದವರಿಗೆಲ್ಲ ಗೊತ್ತು. ಹೀಗಿದ್ದರೂ ಬೆಲೆ ಏರಿಕೆಯ ಪಾಪದ ಹೊರೆಯನ್ನು ನಮ್ಮ ತಲೆ ಮೇಲೆ ಕಟ್ಟಲು ಹೊರಟಿರುವ ಬಿಜೆಪಿ ನಾಯಕರ ಮುಖಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಮಸಿ ಬಳಿದಿದ್ದಾರೆ.

ಜನಾಕ್ರೋಶ ಯಾತ್ರೆ ಹೊರಟವರ ಮುಂದೆ ಈಗ ಇರುವುದು ಎರಡೇ ಎರಡು ಆಯ್ಕೆ: ಒಂದೋ ಅವರು ಪ್ರಧಾನ ಮಂತ್ರಿಯವರ ಮೇಲೆ ಒತ್ತಡ ಹೇರಿ ಕೇಂದ್ರ ಸರ್ಕಾರ ಹೆಚ್ಚಿಸಿರುವ ಬೆಲೆಯನ್ನು ಇಳಿಸುವಂತೆ ಮಾಡಬೇಕು, ಇಲ್ಲವೇ ಯಾತ್ರೆಯನ್ನು ಕೊನೆಗೊಳಿಸಿ ಗಂಟುಮೂಟೆ ಕಟ್ಟಿಕೊಂಡು ತಮ್ಮ ತಮ್ಮ ಮನೆಗೆ ಮರಳಬೇಕು. ಇದರ ಹೊರತಾಗಿ ಈ ಯಾತ್ರೆಯ ಪ್ರಹಸನವನ್ನು ಮುಂದುವರಿಸಿದರೆ ಜನರ ಆಕ್ರೋಶಕ್ಕೆ ತುತ್ತಾಗುವುದು ಖಂಡಿತ.

Related Articles

Back to top button