*ಬೆಳಗಾವಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇವರಿಬ್ಬರ ಹೆಸರು ಶಿಫಾರಸ್ಸು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಳೆದ ಹಲವು ದಿನಗಳಿಂದ ತೀವ್ರ ಚರ್ಚೆಗೆ ಒಳಗಾಗಿರುವ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ತಲಾ ಒಬ್ಬರ ಹೆಸರು ಅಂತಿಮಗೊಳಿಸಿ ರಾಜ್ಯ ಸಮಿತಿಗೆ ಕಳಿಸಲಾಗಿದೆ ಎಂದು ಗೊತ್ತಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿರುವುದರಿಂದ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದೆ. ಆಡಳಿತದಲ್ಲಿರುವ ಪಕ್ಷದ ಜಿಲ್ಲಾ ಅಧ್ಯಕ್ಷ ಸ್ಥಾನ ಅತ್ಯಂತ ಪ್ರಮುಖ ಹುದ್ದೆಯಾಗಿದೆ. ಹಾಗಾಗಿ ಈ ಸ್ಥಾನಕ್ಕೆ ಭಾರೀ ಪೈಪೋಟಿ, ಲಾಬಿ ಸಾಮಾನ್ಯ.
ಬೆಳಗಾವಿ ಗ್ರಾಮೀಣ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಬಸವರಾಜ ಶೇಗಾವಿ ಹೆಸರು ಶಿಫಾರಸ್ಸು ಮಾಡಲಾಗಿದೆ ಎಂದು ಗೊತ್ತಾಗಿದೆ. ಬಸವರಾಜ ಶೇಗಾವಿ ಹಾಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಬೆಳಗಾವಿ ಜಿಲ್ಲಾ ಅಧ್ಯಕ್ಷರಾಗಿ ವಿನಯ ನಾವಲಗಟ್ಟಿ 2015ರಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಈಗ ಅವರು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಬೆಳಗಾವಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಇನ್ನೂ 2 -3 ಜನರು ಪ್ರಯತ್ನ ನಡೆಸಿದ್ದು, ರಾಜ್ಯ ಸಮಿತಿ ಯಾರ ಹೆಸರನ್ನು ಅಂತಿಮಗೊಳಿಸಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
ಚಿಕ್ಕೋಡಿಗೆ ನಾಯಿಕವಾಡಿ
ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಅರ್ಜುನ ನಾಯಿಕವಾಡಿ ಹೆಸರು ಶಿಫಾರಸ್ಸು ಮಾಡಲಾಗಿದೆ. ಅವರು ಸಧ್ಯ ಚಿಕ್ಕೋಡಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾಗಿದ್ದಾರೆ. 2017ರಿಂದ ಲಕ್ಷ್ಮಣರಾವ್ ಚಿಂಗಳೆ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾಗಿದ್ದಾರೆ. ಸಧ್ಯ ಅವರು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ.
ಬೆಳಗಾವಿ ಮಹಾನಗರ ಅಧ್ಯಕ್ಷ ಸ್ಥಾನಕ್ಕೆ 3 -4 ಜನರು ಪೈಪೋಟಿ ನಡೆಸಿದ್ದು, ಇನ್ನೂ ಹೆಸರು ಶಿಫಾರಸ್ಸು ಮಾಡಲಾಗಿಲ್ಲ. 2011ರಿಂದ ಮಹಾನಗರ ಅಧ್ಯಕ್ಷರಾಗಿರುವ ಆಸೀಫ್ ಸೇಠ್ ಸಧ್ಯ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾಗಿದ್ದಾರೆ. ರಾಜಾ ಸಲೀಮ್ ಕಾಶಿಂ ಸಾಬ್, ಲೋಕೇಶ್, ಮಾಡಿವಾಲೆ ಸೇರಿದಂತೆ 3 -4 ಜನರು ಪ್ರಯತ್ನ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ