ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದಲ್ಲಿ ಕೈಗೊಂಡಿರುವ ಸ್ಮಾರ್ಟ್ ಸಿಟಿಯ ಯಾವುದೇ ಕಾಮಗಾರಿ ವಿಳಂಬ ಮಾಡದೇ ತ್ವರಿತವಾಗಿ ಪೂರ್ಣಗೋಳಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ ಸೂಚನೆ ನೀಡಿದರು.
ಮಹಾನಗರ ಪಾಲಿಕೆಯ ಸಭಾಭವನದಲ್ಲಿ ಶನಿವಾರ(ಮಾ.೭) ಮಹಾನಗರ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಹಾಗೂ ವಿವಿಧ ಕಾಮಗಾರಿಗಳನ್ನು ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಬೇಕು.
ಕಳಪೆ ಕಾಮಗಾರಿ ಕಂಡುಬಂದಲ್ಲಿ ಅಂತಹ ಕಾಮಗಾರಿಗಳನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.
ಮುಂದಿನ ಸಭೆಯಲ್ಲಿ ಕಾಮಗಾರಿಗಳ ಕುರಿತು ಸರಿಯಾದ ಮಾಹಿತಿ ನೀಡಬೇಕು. ಇಲ್ಲದಿದ್ದರೆ ನಿರ್ದಾಕ್ಷಿಣ್ಯವಾಗಿ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎ ಬಸವರಾಜ ಅವರು ಅಧಿಕಾರಿಗಳಿಗೆ ಹೇಳಿದರು.
ಮಹಾನಗರ ಪಾಲಿಕೆಗೆ ಬರುವಂತಹ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ವಿಳಂಬ ಮಾಡದೇ ಸರಿಯಾದ ಸಮಯಕ್ಕೆ ಮಾಡಿಕೊಡಬೇಕು ಎಂದು ಸಚಿವ ಬಸವರಾಜ ನಿರ್ದೇಶನ ನೀಡಿದರು.
ಈ ವೇಳೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ, ಶಾಸಕರಾದ ಅನಿಲ ಬೆನಕೆ, ಅಭಯ ಪಾಟೀಲ್, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ ಕೆ. ಎಚ್, ಸ್ಮಾರ್ಟ್ ಸಿಟಿ ವ್ಯವಸ್ತಾಪಕ ನಿರ್ದೇಶಕ ಶಶಿಧರ ಕುರೇರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಘೂಳಪ್ಪ ಹೊಸಮನಿ ಉಪಸ್ಥಿತರಿದ್ದರು
ಸ್ಮಾರ್ಟ್ ಸಿಟಿ ಕಾಮಗಾರಿ ಪರಿಶೀಲನೆ:
ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಥಾಪಿಸಲಾಗಿರುವ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಬಸವರಾಜ ಅವರು, ನಗರದಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ದೃಶ್ಯಗಳನ್ನು ಸ್ಮಾರ್ಟ್ ಬೋರ್ಡ್ ಮುಖಾಂತರ ವೀಕ್ಷಿಸಿದರು.
ನೆಟ್‌ವರ್ಕ್ ನಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸ್ಮಾರ್ಟ್ ಬಸ್ ಶೆಲ್ಟರ್ ನಲ್ಲಿರುವ ಸುರಕ್ಷತೆಯ ಬಗ್ಗೆ ಅಧಿಕಾರಿಗಳಂದ ಮಾಹಿತಿ ಪಡೆದುಕೊಂಡ ಸಚಿವರು, ಪ್ರಯಾಣಿಕರ ಸುರಕ್ಷತೆಗಾಗಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸರಿಯಾಗಿ ಕಾರ್ಯನಿರ್ವಹಿಸುವುದು ಅಗತ್ಯವಾಗಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸ್ಮಾರ್ಟ್ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದಲ್ಲಿ ಅವಶ್ಯಕತೆ ಇರುವ ಸಾರಿಗೆ, ಪೊಲೀಸ್ ಮತ್ತಿತರ ಇಲಾಖೆಯ ಅಧಿಕಾರಿಗಳು ಆದಷ್ಟು ಬೇಗನೆ ಹಾಜರಾಗಿ ಕಾರ್ಯನಿರ್ವಹಿಸಬೇಕೆಂದು ಸಚಿವರು ಸೂಚನೆ ನೀಡಿದರು.
ಬಸ್ ನಿಲ್ದಾಣದ ಕಾಮಗಾರಿ ಪರಿಶೀಲನೆ:
ಕೇಂದ್ರ ಬಸ್ ನಿಲ್ದಾಣದ ಸಮೀಪ ಕೈಗೊಂಡಿರುವ ನಗರ ಬಸ್ ನಿಲ್ದಾಣದ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕು. ಮಳೆಗಾಲದಲ್ಲಿ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಮುಂದಿನ ಭೇಟಿಯ ವೇಳೆ ಕಾಮಗಾರಿ ಅರ್ಧದಷ್ಟು ಮುಗಿದಿರಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ಅನಿಲ ಬೆನಕೆ ಅವರು, ವಾರ್ಡ ಸಂಖ್ಯೆ ೫೨ ಹಾಗೂ ೫೩ ವಾರ್ಡಗಳನ್ನು ಮಾದರಿ ವಾರ್ಡ ಮಾಡಲು ೨೫ ಕೋಟಿ ಮತ್ತು ಅಲರವಾಡ ದಿಂದ ಬಸವನ ಕುಡಚಿ ರಸ್ತೆ ಅಭಿವೃದ್ದಿ ಪಡಿಸಲು ೭ ಕೋಟಿ ಅನುದಾನ ಬಿಡುಗಡೆಗೆ ಮಾಡುವಂತೆ ನಗರಾಭಿವೃದ್ಧಿ ಸಚಿವರಾದ ಬಿ. ಎ ಬಸವರಾಜ ಅವರಿಗೆ ಮನವಿ ಮಾಡಿಕೊಂಡರು.
ಮಾಜಿ ಶಾಸಕ ಸಂಜಯ ಪಾಟೀಲ್, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ ಕೆ. ಎಚ್, ಸ್ಮಾರ್ಟ್ ಸಿಟಿ ವ್ಯವಸ್ತಾಪಕ ನಿರ್ದೇಶಕ ಶಶಿಧರ ಕುರೆರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಘೂಳಪ್ಪ ಹೊಸಮನಿ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ