ಪ್ರಗತಿವಾಹಿನಿ ಸುದ್ದಿ: ಡಾಟಾ ಎಂಟ್ರಿ ಆಪರೇಟರ್, ವಾಹನ ಚಾಲಕರು, ಗ್ರೂಪ್ ಡಿ ಹಾಗೂ ಸ್ವಚ್ಛತಾ ಸಿಬ್ಬಂದಿ ಒಳಗೊಂಡು ಎಲ್ಲ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲೂ ಇನ್ನು ಮುಂದೆ ಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲು ನಿಯಮ ಪಾಲನೆ ಕಡ್ಡಾಯವಾಗಿದೆ ಎಂದು ಐತಿಹಾಸಿಕ ಆದೇಶ ಹೋರಡಿಸಿದ್ದಾರೆ.
ಕಳೆದ ವರ್ಷ ಡಿ.21 ರಂದು ಸಚಿವ ಸಂಪುಟ ಸಭೆ ಕೈಗೊಂಡಿದ್ದ ನಿರ್ಣಯ ಆಧರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಈ ಸಂಬಂಧ ಸುತ್ತೋಲೆ ಹೊರಡಿಸಿದೆ.
ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33 ಮೀಸಲು ಕಡ್ಡಾಯವಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದೂಳಿದ ವರ್ಗಗಳಿಗೆ ಎಲ್ಲ ಇಲಾಖೆಗಳು, ಸ್ವಾಯತ್ತ ಸಂಸ್ಥೆ, ನಿಗಮ, ಮಂಡಳಿ, ವಿಶ್ವವಿದ್ಯಾಲಯಗಳಿಗೂ ಇದು ಅನ್ವಯವಾಗಲಿದೆ
ಇನ್ನು ಈ ಬಗ್ಗೆ ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಂಮತ್ರಿ ಸಿದ್ದರಾಮಯ್ಯ ಅವರು, ಸಂಪತ್ತು, ಅಧಿಕಾರ, ಅವಕಾಶಗಳು ಸಮಾನವಾಗಿ ಹಂಚಿಕೆಯಾಗಬೇಕೆಂಬ ಸಮಸಮಾಜದ ಆಶಯವೇ ನಮ್ಮ ಸರ್ಕಾರದ ಆಶಯವಾಗಿದೆ ಹಾಗಾಗಿ ಹೊರಗುತ್ತಿಗೆ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆಗೆ ಅವಕಾಶ ಕಲ್ಪಿಸುವ ಐತಿಹಾಸಿಕ ಹೆಜ್ಜೆಯಿರಿಸಿದ್ದೇವೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ