*ಇಂದಿನಿಂದ ಐದು ದಿನ ಮಳೆ ಸೂಚನೆ ನೀಡಿದ ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜ್ಯಾದ್ಯಂತ ಹಲವಾರು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಉತ್ತರ ಒಳನಾಡು, ದಕ್ಷಣ ಒಳನಾಡು, ಕಾರವಳಿ ಭಾಗಗಳಲ್ಲಿ ಕೂಡಾ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.
ಆಗಸ್ಟ್ ತಿಂಗಳಿನಲ್ಲಿ ರಾಜ್ಯದಲ್ಲಿ ವಾಡಿಕೆಯಂತೆ 22 ಸೆಂ.ಮೀ ಮಳೆಯಾಗಬೇಕು. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಆಗಸ್ಟ್ ತಿಂಗಳಲ್ಲಿ 82 ಸೆಂ.ಮೀ ಮಳೆಯಾಗುವ ನಿರೀಕ್ಷೆಯಿದೆ. ಟ್ರಫ್ ಅಥವಾ ವಾಯುಭಾರ ಕುಸಿತ ಉಂಟಾದರೆ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತದೆ. ಉತ್ತರ ಒಳನಾಡಿನಲ್ಲಿ 12 ಸೆಂ.ಮೀ ಮಳೆಯಾಗಬೇಕು. ಆದರೆ ನೀರಿಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ದಕ್ಷಿಣ ಒಳನಾಡಿನಲ್ಲಿ 18 ಸೆಂ.ಮೀ ಮಳೆಯಾಗಬೇಕು. ಇದಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನಲ್ಲಿ 12 ಸೆಂ.ಮೀ ಮಳೆಯಾಗಬೇಕು. ಆದರೆ ಮಂಗಳವಾರ ಒಂದೇ ದಿನ 4 ಸೆಂ.ಮೀ ಮಳೆಯಾಗಿದ್ದು, ಇನ್ನೂ ಹೆಚ್ಚು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ