*ಇನ್ನು ಒಂದು ವಾರ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಪೈಕಿ ಕರಾವಳಿ, ಮಲೆನಾಡು ಭಾಗದಲ್ಲಿ ಅ. 22 ರವರೆಗೆ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಇನ್ನು ಉತ್ತರ ಒಳನಾಡು ಭಾಗವೂ ಒಳಗೊಂಡಂತೆ ರಾಜ್ಯದ 18 ಜಿಲ್ಲೆಗಳಲ್ಲಿ ಅ. 17ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇತ್ತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅ. 16 ಮತ್ತು 17 ರಂದು ಮಳೆ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಪ್ರದೇಶದ ಪೂರ್ವ ಜಿಲ್ಲೆಗಳಲ್ಲೂ ಭಾರಿ ಮಳೆಯ ನಿರೀಕ್ಷೆಯಿದೆ.
ಇನ್ನುಳಿದಂತೆ, ಕೋಲಾರ, ರಾಮನಗರ, ಬೆಂಗಳೂರು, ಮಂಡ್ಯ ಮೈಸೂರು, ತುಮಕೂರು, ಚಾಮರಾಜನಗರ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಹಾಗೂ ಹಾವೇರಿ, ಧಾರವಾಡ ಜಿಲ್ಲೆಗಳ ಹಲವೆಡೆ ಅ. 17ರವರೆಗೆ ಭಾರಿ ಮಳೆ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಅ. 17ರವರೆಗೆ ಭಾರಿ ಮಳೆಯ ಸಾಧ್ಯತೆಯಿದ್ದು, ಬುಧವಾರದಿಂದ ರಾಜಧಾನಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



