ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಂಗಭೂಮಿ ಹಿರಿಯ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ಅವರು ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲೇ ಸುಭದ್ರಮ್ಮ ಮೃತಪಟ್ಟಿದ್ದರು.
ಹಿರಿಯ ಕಲಾವಿದೆ ಸುಭದ್ರಮ್ಮ ಮನ್ಸೂರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಾಲ ಕಲಾವಿದೆಯಾಗಿ ರಂಗಭೂಮಿ ಪ್ರವೇಶಿಸಿದ ಸುಭದ್ರಮ್ಮ ಮನ್ಸೂರ್, ಬದುಕಿನ ಏಳುಬೀಳುಗಳ ನಡುವೆಯೂ ವೃತ್ತಿ ರಂಗಭೂಮಿಯಲ್ಲಿ ತಮ್ಮದೇ ಛಾಪು ಮೂಡಿಸಿದವರು. ರಕ್ತರಾತ್ರಿ ನಾಟಕದಲ್ಲಿನ ದ್ರೌಪದಿಯ ಪಾತ್ರ, ಕುರುಕ್ಷೇತ್ರ ನಾಟಕದ ಗಾಂಧಾರಿಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಮನೆ ಮಾತಾಗಿದ್ದವರು ಎಂದು ಮುಖ್ಯಮಂತ್ರಿಯವರು ಸ್ಮರಿಸಿದ್ದಾರೆ.
ಇವರ ನಿಧನದಿಂದ ರಂಗಭೂಮಿಯು ಅನರ್ಘ್ಯ ರತ್ನವೊಂದನ್ನು ಕಳೆದುಕೊಂಡಂತಾಗಿದೆ. ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ