*ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲಿನ ದಾಳಿಗೆ ಕಾರಣ ಬೇರೆ ಇದೆ: ಇಡಿ*

ಪ್ರಗತಿವಾಹಿನಿ ಸುದ್ದಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಬೆಳಗಾವಿ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನಡೆಸಿದ್ದು, ಇದೀಗ ಈ ದಾಳಿಗೂ ಮಂಜುನಾಥ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಇಡಿ ಸ್ಪಷ್ಟಪಡಿಸಿದೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA)–1999ರ ಅಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ನಿವಾಸಗಳು ಮತ್ತು ಅವರ ಆಪ್ತರ ಮನೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಇಡಿ ಮಾಹಿತಿ ನೀಡಿದೆ.
ವಿದೇಶಗಳಲ್ಲಿ ನಡೆದಿರುವ ಎನ್ನಲಾದ ಅಕ್ರಮ ಹೂಡಿಕೆಗಳು ಹಾಗೂ ಹಣಕಾಸು ವಹಿವಾಟುಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಡಾಲರ್ಸ್ ಕಾಲೋನಿ ನಿವಾಸದ ಮೇಲೆ ಬುಧವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬೆಳವಣಿಗೆಗೆ ಮುನ್ನ ಜೂನ್‌ನಲ್ಲಿ ಮಂಜುನಾಥ್ ಅವರ ನಿವಾಸ ಸೇರಿದಂತೆ ಬೆಂಗಳೂರು, ಬೆಳಗಾವಿ, ಮೈಸೂರು ಹಾಗೂ ಅಥಣಿ ಭಾಗಗಳಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಆ ಸಂದರ್ಭದಲ್ಲಿ ಅಬಕಾರಿ ಪರವಾನಗಿ ಅಕ್ರಮ, ಬೇನಾಮಿ ಬಾರ್ ಲೈಸೆನ್ಸ್ ಹಾಗೂ ಹಣಕಾಸು ವಹಿವಾಟುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆದಿತ್ತು ಎಂದು ವರದಿಯಾಗಿತ್ತು. ಹೀಗಾಗಿ ಸತೀಶ್ ಜಾರಕಿಹೊಳಿ ಅವರ ಮನೆ ಮೇಲಿನ ದಾಳಿಯೂ ಮಂಜುನಾಥ್ ಪ್ರಕರಣದ ಮುಂದುವರಿದ ಭಾಗ ಎಂಬಂತೆ ಬಿಂಬಿತವಾಗಿತ್ತು. ಆದರೆ ಇದೀಗ ಇಡಿ ನೀಡಿರುವ ಅಧಿಕೃತ ಸ್ಪಷ್ಟನೆಯಿಂದಾಗಿ ಈ ಎರಡು ಪ್ರಕರಣಗಳು ಪ್ರತ್ಯೇಕ ಎಂಬುದು ಬೆಳಕಿಗೆ ಬಂದಿದೆ.
ದಕ್ಷಿಣ ಆಫ್ರಿಕಾ, ಉಗಾಂಡದಲ್ಲಿ ಹೂಡಿಕೆಗಳ ಪರಿಶೀಲನೆ
ಸತೀಶ್ ಜಾರಕಿಹೊಳಿ ಅವರ ಮೇಲಿನ ದಾಳಿ FEMA–1999ರ ಅಡಿಯಲ್ಲಿ ನಡೆಯುತ್ತಿರುವ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ಇಡಿ ತಿಳಿಸಿದೆ. ದಕ್ಷಿಣ ಆಫ್ರಿಕಾ, ಉಗಾಂಡ ಸೇರಿದಂತೆ ವಿವಿಧ ದೇಶಗಳಲ್ಲಿ ಅಕ್ರಮವಾಗಿ ಹೂಡಿಕೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಈ ಹೂಡಿಕೆಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರ ಕಡೆಯಿಂದ ಹಣ ಅಥವಾ ಹೂಡಿಕೆ ನಡೆದಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.



