*ಬ್ರಿಟಿಷರಿಗೆ ಹೆದರದ ಕಾಂಗ್ರೆಸ್ ಬಿಜೆಪಿಗೆ ಹೆದರುವ ಪ್ರಶ್ನೆಯೇ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಕಾರ್ಯಕರ್ತರ ಪಡೆ ಸಜ್ಜಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಕರೆ ನೀಡಿದರು.

ಇಲ್ಲಿನ ಆರ್.ಎನ್. ಶೆಟ್ಟಿ ಭವನದಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವರು, ಸರ್ಕಾರದ ಪಂಚ ಗ್ಯಾರಂಟಿಗಳ ಪ್ರಯೋಜನವನ್ನು ಜನರಿಗೆ ಕಾರ್ಯಕರ್ತರು ತಲುಪಿಸಬೇಕು ಎಂದರು.
ಮುಂದಿನ ದಿನಗಳಲ್ಲಿ ಪ್ರತಿ 45 ದಿನಕ್ಕೊಮ್ಮೆ ಬ್ಲಾಕ್ ಮಟ್ಟದ ಕಾರ್ಯಕರ್ತರನ್ನು ಭೇಟಿಯಾಗಿ ಸಮಸ್ಯೆಗಳನ್ನು ಆಲಿಸಲಾಗುವುದು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಹೇಳಿದರು.

ಸ್ಥಳೀಯ ನಾಯಕರು, ಬ್ಲಾಕ್ ಮಟ್ಟದ ಅಧ್ಯಕ್ಷರು ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸಬೇಕು. ನಾಯಕರು ಕಾರ್ಯಕರ್ತರಿಗೆ ಹತ್ತಿರವಾದಷ್ಟು ದೊಡ್ಡ ಮಟ್ಟಕ್ಕೆ ಬೆಳೆಯುತ್ತಾರೆ ಎಂದರು.
ಕಳೆದ ಅವಧಿಯಲ್ಲಿ ಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಶೂಲಕ್ಕೆ ತಳ್ಳಿದೆ. ಕೇವಲ 4 ವರ್ಷಗಳಲ್ಲಿ ಸುಮಾರು ಮೂರೂವರೆ ಲಕ್ಷ ಕೋಟಿ ರೂ. ಸಾಲದ ಹೊರೆಯನ್ನು ಹೊರಿಸಿದೆ ಎಂದು ಸಚಿವರು ಕಿಡಿಕಾಡಿದರು.
ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸಿದ್ದರಾಮಯ್ಯ ಸಾರಥ್ಯದ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಮುಂದಿನ ಚುನಾವಣೆಯಲ್ಲಿ ಇದರ ಲಾಭ ಪಕ್ಷಕ್ಕೆ ಸಿಗುವಂತಾಗಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರ್ಯಕರ್ತರಿಗೆ ಕರೆ ನೀಡಿದರು.
ದೇಶದಲ್ಲಿ ಕೋಮು ಭಾವನೆಗಳನ್ನು ಕೆರಳಿಸಿದವರು ಇಂದು ಆಡಳಿತ ನಡೆಸುತ್ತಿದ್ದಾರೆ. ಅಂಥ ಬ್ರಿಟಿಷರಿಗೆ ಹೆದರದ ಕಾಂಗ್ರೆಸ್ ಪಕ್ಷ ಇವರಿಗೆ ಹೆದರೋ ಮಾತೇ ಇಲ್ಲ. ಮುಂದಿನ ಚುನಾವಣೆಯಲ್ಲಿ ಯುದ್ಧದಂತೆ ಹೋರಾಡಿ ಗೆಲುವಿಗೆ ಶ್ರಮಿಸಬೇಕೆಂದು ಸಚಿವರು ಹೇಳಿದರು.
ಸಭೆಯಲ್ಲಿ ಕುಂದಾಪುರ ಕಾಂಗ್ರೆಸ್ ಘಟಕದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು. ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ದಿನೇಶ್ ಹೆಗ್ಡೆ, ಕಿಶನ್ ಹೆಗ್ಡೆ ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ