ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ಆರಂಭಿಸಿದದ್ದು, 10 ಸಾವಿರಕ್ಕೂ ಹೆಚ್ಚು ಜನರು ತಮ್ಮ ,ಸಮಸ್ಯೆ ಹೇಳಿಕೊಳ್ಳಲು ಆಗಮಿಸಿದ್ದಾರೆ.
ಜನರ ಬಳಿಗೇ ತೆರಳಿ ಸಮಸ್ಯೆ ಆಲಿಸುತ್ತಿರುವ ಮುಖ್ಯಮಂತ್ರಿಗಳು, 3 ತಿಂಗಳಲ್ಲಿ ಜನಸ್ಪಂದನ ಅರ್ಜಿಗಳಿಗೆ ಪರಿಹಾರ ಕೊಡಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
*ಕಾನೂನು ಪ್ರಕಾರ ಪರಿಹಾರ ಸಾಧ್ಯವಿಲ್ಲದಿದ್ದರೆ ಆ ರೀತಿ ಹಿಂಬರಹ ಕೊಡಬೇಕು. ಪ್ರತೀ ಅರ್ಜಿಗೂ ಸರ್ಕಾರ್ ಸ್ಪಂದನೆ ಇರಬೇಕು ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದರು.
ಕಳೆದ ಸೆಪ್ಟಂಬರ್ ತಿಂಗಳಲ್ಲಿ ನಡೆಸಲಾಗಿರುವ ಜನಸ್ಪಂದನದಲ್ಲಿ 4,030 ಅರ್ಜಿಗಳು ಬಂದಿದ್ದವು. ಅವುಗಳಲ್ಲಿ 3,738 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಉಳಿದವುಗಳಿಗೂ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ನಾವು ಆರಂಭಿಸಿದ ಪಂಚ ಗ್ಯಾರಂಟಿ ಯೋಜನೆಯ ಪ್ರಯೋಜನ ಎಷ್ಟು ಆಗಿದೆ ಎಂದು ತಿಳಿದುಕೊಳ್ಳಲು ನಾನು ಹೋದಲ್ಲೆಲ್ಲ ಜನರ ಬಳಿ ವಿಚಾರಿಸುತ್ತೇನೆ. ಕೈ ಎತ್ತುವ ಮೂಲಕ ಜನರು ತಮಗೆ ಪ್ರಯೋಜನವಾಗುತ್ತಿದೆ ಎಂದು ಹೇಳುತ್ತಿದ್ದಾರೆ. ಅಂದರೆ ಯೋಜನೆ ಸರಿಯಾಗಿ ಜಾರಿಯಾಗಿದೆ ಎಂದು ಅರ್ಥವಲ್ಲವೇ ಎಂದು ಅವರು ಪ್ರಶ್ನಿಸಿದರು.
ಪಂಚ ಗ್ಯಾರಂಟಿಗಳಿಂದಾಗಿ ಅಭಿವೃದ್ಧಿ ಯೋಜನೆಗಳು ಸ್ಥಗಿತವಾಗಿವೆ ಎಂದು ವಿರೋಧ ಪಕ್ಷಗಳು ಹೇಳುತ್ತಿವೆ. ಪಂಚ ಗ್ಯಾರಂಟಿಗಳೂ ಅಭಿವೃದ್ಧಿ ಕಾರ್ಯಕ್ರಮಗಳಲ್ಲವೇ? ಜನರನ್ನು ಬಡತನರೇಖೆಯಿಂದ ಮೇಲೆತ್ತುವ ಯೋಜನೆಗಳಲ್ಲವೇ ಇವು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಅಭಿವೃದ್ಧಿ, ಸಮಾನತೆ, ಸಾಮಾಜಿಕ ನ್ಯಾಯ ಇವು ಮೂರೂ ವಿರೋಧ ಪಕ್ಷಗಳಿಗೆ ಗೊತ್ತೇ ಇಲ್ಲ ಎಂದು ಮುಖ್ಯಮಂತ್ರಿಗಳು ಕಿಚಾಯಿಸಿದರು.
ನವೆಂಬರ್ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದು ವಿವರಿಸಿದರು. ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು ಎಂದು ತಿಳಿಸಿದರು.
ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು; ಜನರ ಸಮ್ಸಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು; ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ. ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದು ತಿಳಿಸಿದ್ದಾರೆ. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ; ಅಸಮಾನತೆ ನಿವಾರಿಸುವ ಕಾರ್ಯಕ್ರಮ. ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು. ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯದ ನಾಯಕರು ಈಗ ಕೊಟ್ಟು ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದಾರೆ. ಇದು ಬಡವರ ಕಾರ್ಯಕ್ರಮ. ಜೊತೆಗೆ ಅಸಮಾನತೆ ಹೋಗಲಾಡಿಸಲು ಮಾಡಿದ ಕಾರ್ಯಕ್ರಮಗಳು. ನಾವು ಸಂವಿಧಾನ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರವವರು.
ಭ್ರಾತೃವ ಬೆಳೆಯಬೇಕು, ಸಮಾನತೆ ಬೆಳೆಯಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ನುಡಿದರು.
ಜನಸ್ಪಂದನೆಗೆ ಅಭೂತಪೂರ್ವ ಜನ ಸ್ಪಂದನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಸೆಂಟ್ರಲ್ DCP ಶೇಖರ್ ಅವರ ನೇತೃತ್ವದಲ್ಲಿ 8 ಎಸಿಪಿ, 23 ಇನ್ಸ್ ಪೆಕ್ಟರ್ಸ್, 58 ಸಬ್ ಇನ್ಸ್ ಪೆಕ್ಟರ್ಸ್, 205 ಪೊಲೀಸ್ ಕಾನ್ಸಟಬಲ್ಸ್, 142 ಮಹಿಳಾ ಪೊಲೀಸ್ ಸಿಬ್ಬಂದಿ, 500 ಹೋಮ್ ಗಾರ್ಡ್ಸ್ ಸೇರಿದಂತೆ ಒಟ್ಟೂ 936 ಸಿಬ್ಬಂದಿ ನಿಯೋಜಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ