ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೋವಿಡ್-೧೯ ಲಸಿಕಾಕರಣ ಕಾರ್ಯಕ್ರಮವನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ಕೈಗೊಂಡು ನೋಂದಾಯಿತ ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ (ಜ.27) ನಡೆದ 2020-21ನೇ ಸಾಲಿನ ಮೂರನೇ ತ್ರೈಮಾಸಿಕ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬೀಜ-ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಗೊಬ್ಬರ ವಿತರಣೆಗೆ ಸಂಬಂಧಿಸಿದಂತೆ ಆರಂಭದಲ್ಲಿ ಕೆಲವು ದೂರುಗಳು ಬಂದಿವೆ. ಈ ಬಗ್ಗೆ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದರು.
ಮೂಲಸೌಕರ್ಯ ದುರಸ್ತಿಗೆ ಸೂಚನೆ:
ಜಿಲ್ಲೆಯಾದ್ಯಂತ ವಿಶೇಷವಾಗಿ ನದಿತೀರದ ಗ್ರಾಮಗಳಲ್ಲಿ ಪ್ರವಾಹದಿಂದ ಹಾನಿಗೊಳಗಾದ ರಸ್ತೆ ಮತ್ತಿತರ ಮೂಲಸೌಕರ್ಯಗಳ ದುರಸ್ತಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಸಚಿವರ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಸಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.
ಅನೇಕ ರಸ್ತೆಗಳು ಹದಗೆಟ್ಟಿರುವುದರಿಂದ ಸಂಚಾರಕ್ಕೆ ತೀವ್ರ ಅನಾನುಕೂಲವಾಗುತ್ತಿದೆ. ಇಂತಹ ರಸ್ತೆ ದುರಸ್ತಿಗೆ ಲೋಕೋಪಯೋಗಿ ಇಲಾಖೆ ಹಾಗೂ ಕೆಶಿಪ್ ಅಧಿಕಾರಿಗಳು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು.
ರಸ್ತೆ ನಿರ್ವಹಣೆ; ಅಧಿಕಾರಿಗಳ ಹೊಣೆ:
ರಸ್ತೆಗಳ ನಿರ್ವಹಣೆಯ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ತೋರುವುದರಿಂದ ಸಂಚಾರಕ್ಕೆ ತೊಂದರೆಯಾಗುವುದರ ಜತೆಗೆ ಸರ್ಕಾರಿ ಆಸ್ತಿ ಅತಿಕ್ರಮಣ ಆಗುತ್ತಿದೆ. ಈ ಕುರಿತು ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಶ್ರೀಮಂತ ಪಾಟೀಲ ತಿಳಿಸಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ ಲೋಕೋಪಯೋಗಿ ಇಲಾಖೆಯ ರಸ್ತೆಗಳ ನಿರ್ವಹಣೆ ಮತ್ತು ಅತಿಕ್ರಮಣ ತೆರವು ಕಡೆಗೆ ಅಧಿಕಾರಿಗಳು ಗಮನಹರಿಸಬೇಕು ಎಂದು ತಿಳಿಸಿದರು.
ಬೆಳೆ ಪರಿಹಾರ ತಾರತಮ್ಯ ಸರಿಪಡಿಸಲು ಒತ್ತಾಯ:
ನೆರೆಯ ಧಾರವಾಡ ಜಿಲ್ಲೆಗೆ ಹೋಲಿಸಿದರೆ ಬೆಳೆಪರಿಹಾರ ವ್ಯತ್ಯಾಸವನ್ನು ಸರಿಪಡಿಸಲು ಪ್ರತಿ ಸಭೆಯಲ್ಲಿ ಚರ್ಚೆ ಮಾಡಲಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಒತ್ತಾಯಿಸಿದರು.
ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ಮೂಲಸೌಕರ್ಯಗಳ ದುರಸ್ತಿ ಸೇರಿದಂತೆ ಅನೇಕ ಕಾಮಗಾರಿಗಳು ಆರಂಭಗೊಂಡಿಲ್ಲ ಎಂದು ಸಚಿವರ ಗಮನಸೆಳೆದರು.
ಕೊಳಗೇರಿ ಪ್ರಸ್ತಾವ ಸಲ್ಲಿಸಲು ಸೂಚನೆ:
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ, ಜಿಲ್ಲೆಯಾದ್ಯಂತ ಕೊಳಗೇರಿ ಪ್ರದೇಶಗಳನ್ನು ಗುರುತಿಸಿ ನಿಯಮಾವಳಿ ಪ್ರಕಾರ ಪ್ರಸ್ತಾವ ಸಲ್ಲಿಸಲು ಕ್ರಮಕೈಗೊಳ್ಳಬೇಕು ಎಂದು ಕೊಳಗೇರಿ ನಿರ್ಮೂಲಿ ಮಂಡಳಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೋವಿಡ್-೧೯ ಸಂದರ್ಭದಲ್ಲಿ ಕ್ವಾರಂಟೈನ್ ಗೆ ಹೋಟೆಲ್ ಒದಗಿಸಿದವರು ಮತ್ತು ವಿವಿಧ ವಸ್ತು ಮತ್ತು ಉಪಕರಣಗಳನ್ನು ಪೂರೈಸಿದವರಿಗೆ ತಕ್ಷಣವೇ ಬಿಲ್ ಮಾಡಬೇಕು ಎಂದು ಶಾಸಕ ಅನಿಲ್ ಬೆನಕೆ ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಪಾಲಿಕೆ ಆಯುಕ್ತರಾದ ಜಗದೀಶ್ ಅವರು, ಈಗಾಗಲೇ ಒಂದು ಹೋಟೆಲ್ ಹೊರತುಪಡಿಸಿ ಎಲ್ಲ ಹೋಟೆಲ್ ಬಿಲ್ ಪಾವತಿಸಲಾಗಿದೆ ಎಂದು ತಿಳಿಸಿದರು.
ಬೆಳೆಪರಿಹಾರ ವ್ಯತ್ಯಾಸ; ಚರ್ಚಿಸಿ ಕ್ರಮ:
ಬೆಳೆಪರಿಹಾರ ವ್ಯತ್ಯಾಸ ಸರಿಪಡಿಸಲು ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳ ವಿಮಾ ಕಂಪನಿಗಳ ಪ್ರತಿನಿಧಿಗಳ ಜತೆ ಚರ್ಚಿಸಿ ಒಂದು ವಾರದಲ್ಲಿ ಈ ಬಗ್ಗೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.
ಕೋವಿಡ್ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಎರಡನೇ ಹಂತದ ನೋಂದಣಿ ಆರಂಭಿಸಲಾಗಿದೆ. ಮೊದಲ ಹಂತದಲ್ಲಿ ಲಸಿಕಾಕರಣ ಸಂದರ್ಭದಲ್ಲಿ ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮ ಕಂಡುಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ವಿವರಿಸಿದರು.
ಕ್ಷಯರೋಗ, ಪೊಲಿಯೋ ಸೇರಿದಂತೆ ಎಲ್ಲ ರೀತಿಯ ಲಸಿಕಾ ಕಾರ್ಯಕ್ರಮಗಳು ಕೂಡ ನಿಗದಿತ ವೇಳಾಪಟ್ಟಿಯಂತೆ ನಡೆಸಲಾಗುತ್ತಿದೆ ಎಂದರು.
ಮೂರು ದಿನಗಳಲ್ಲಿ ಬೆಳೆ ಸಮೀಕ್ಷೆ ಪೂರ್ಣಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ವಿವರಿಸಿದರು.
ಶಾಸಕರಾದ ಮಹಾದೇವಪ್ಪ ಯಾದವಾಡ, ಗಣೇಶ್ ಹುಕ್ಕೇರಿ ಅವರು ರಸ್ತೆ ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳ ದುರಸ್ತಿಯ ಬಗ್ಗೆ ಸಚಿವರ ಗಮನಸೆಳೆದರು.
ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಉಪಾಧ್ಯಕ್ಷ ಅರುಣ ಕಟಾಂಬಳೆ, ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಕೋವಿಡ್ ಲಸಿಕಾಕರಣ, ವಿದ್ಯಾರ್ಥಿ ವೇತನ ಬಿಡುಗಡೆ ಸೇರಿದಂತೆ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ