*ಸಿನಿಮಾ ಶೈಲಿಯಲ್ಲಿ ಬೆದರಿಕೆ ರೀಲ್ಸ್: ಯುವಕನ ವಿರುದ್ಧ ಗೂಂಡಾ ಕಾಯ್ದೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸಿನಿಮೀಯ ಶೈಲಿಯಲ್ಲಿ ಜನರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದ ಬಾಳೇಶ ಎಂಬಾತನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಳೇಶ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಬೈಕ್ ಹಾಗೂ ಕಾರುಗಳಲ್ಲಿ ಜನರನ್ನು ಕರೆದುಕೊಂಡು ಹೋಗಿ, ಸಾರ್ವಜನಿಕರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ರೀಲ್ಸ್ ಮಾಡುತ್ತಿದ್ದ ಎನ್ನಲಾಗಿದೆ. ಇಂತಹ ಚಟುವಟಿಕೆಗಳು ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹಾಗೂ ಸಾರ್ವಜನಿಕರಲ್ಲಿ ಭೀತಿ ಮೂಡಿಸುವಂತಹ ಪೋಸ್ಟ್ಗಳು ಮತ್ತು ರೀಲ್ಸ್ಗಳನ್ನು ಮಾಡುವವರ ವಿರುದ್ಧ ಪೊಲೀಸರು ನಿಗಾ ವಹಿಸುತ್ತಿದ್ದಾರೆ. ಇಂತಹ ಚಟುವಟಿಕೆಗಳಲ್ಲಿ ತೊಡಗುವವರು ಮುಂದಿನ ದಿನಗಳಲ್ಲಿ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಅಥವಾ ಪೋಸ್ಟ್ ಮಾಡುವಾಗ ಅದರ ಪರಿಣಾಮಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರಿಗೆ ಬೆದರಿಕೆ ಅಥವಾ ಪ್ರಚೋದನೆ ನೀಡುವ ರೀತಿಯ ವಿಷಯಗಳನ್ನು ಪ್ರಕಟಿಸಬಾರದು ಎಂದು ಎಸ್ಪಿ ಕೆ. ರಾಮರಾಜನ್ ಸಲಹೆ ನೀಡಿದರು.




