Kannada NewsKarnataka NewsLatest

*ಮೂರು ದಿನ ಮಳೆ ಅಬ್ಬರ*: *ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!*

ಪ್ರಗತಿವಾಹಿನಿ ಸುದ್ದಿ: ಮುಂಗಾರು ಮಳೆ ಹಿಂದೆ ಸರಿದ ಬೆನ್ನಲ್ಲೇ ಹಿಂಗಾರು ಮಳೆ ಚುರುಕುಗೊಂಡಿದೆ. ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದ್ದು, ಕೆಲವೆಡೆ ಗುಡುಗು, ಮಿಂಚಿನ ಜೊತೆಗೆ ಬಿರುಗಾಳಿಯೂ ಬೀಸಬಹುದು. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕಿದೆ.

ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರದ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 16ರಂದು ದಕ್ಷಿಣ ಕನ್ನಡದ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗಬಹುದು. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಇದೇ ವೇಳೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮೈಸೂರು, ಶಿವಮೊಗ್ಗ ಮತ್ತು ತುಮಕೂರಿನಲ್ಲೂ ಭಾರಿ ಮಳೆಯ ಮುನ್ಸೂಚನೆ ಇದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲೂ ಮಳೆಯಾಗಬಹುದು.

ಅಕ್ಟೋಬರ್ 16ರಂದು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಬಹುದು. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ ಎಂದು ಮುನ್ಸೂಚನೆ ತಿಳಿಸಿದೆ.

ಅಕ್ಟೋಬರ್ 17ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಬಹುದು. ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ದಾವಣಗೆರೆ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲೂ ಅಕ್ಟೋಬರ್ 17ರಂದು ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಮತ್ತು ತೀವ್ರತೆಯಲ್ಲಿ ಬದಲಾವಣೆ ಸಾಧ್ಯವಿರುವುದರಿಂದ ಹವಾಮಾನ ಇಲಾಖೆಯ ಹೊಸ ಮುನ್ಸೂಚನೆಗಳನ್ನು ಗಮನಿಸುವುದು ಅಗತ್ಯವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button