ಪ್ರಗತಿವಾಹಿನಿ ಸುದ್ದಿ, ಗೋಕಾಕ : ಜಿಪಂ ಮಾಜಿ ಅಧ್ಯಕ್ಷ ಈರಣ್ಣಾ ಕಡಾಡಿ ಅವರಿಗೆ ಬಿಜೆಪಿಯು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
೪ ಸ್ಥಾನಗಳಿಗಾಗಿ ಜೂ.೧೯ ರಂದು ನಡೆಯಬೇಕಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿಯು ತನ್ನ ಎರಡು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು, ಅದರಲ್ಲಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಈರಣ್ಣಾ ಕಡಾಡಿ ಅವರಿಗೆ ಟಿಕೇಟ್ ನೀಡಿದ್ದು, ಇದರಿಂದ ಬೆಳಗಾವಿ ಜಿಲ್ಲೆ ಹಾಗೂ ಅರಭಾವಿ ವಿಧಾನಸಭಾ ಮತಕ್ಷೇತ್ರಕ್ಕೆ ಒಳ್ಳೆಯದಾಗಲಿದೆ ಎಂದು ಹೇಳಿದ್ದಾರೆ.
ಅರಭಾವಿ ಕ್ಷೇತ್ರಕ್ಕೆ ಸೇರಿರುವ ಈರಣ್ಣಾ ಕಡಾಡಿ ಅವರು ಕಳೆದ ೩೦ ವರ್ಷಗಳಿಂದ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಪ್ರಬಲ ಅಭ್ಯರ್ಥಿಗಳ ಮಧ್ಯೆಯೂ ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ರಾಜ್ಯಸಭೆಗೆ ಆಯ್ಕೆ ಮಾಡಿರುವುದು ಪಕ್ಷ ತನ್ನ ಹಳೆಯ ಕಾರ್ಯಕರ್ತರನ್ನು ಎಂದಿಗೂ ಕೈಬಿಡುವುದಿಲ್ಲ ಎಂಬುದಕ್ಕೆ ಇದೊಂದು ನಿದರ್ಶನವಾಗಿದೆ. ಮುಂದಿನ ದಿನಗಳಲ್ಲಿ ಈರಣ್ಣಾ ಕಡಾಡಿ ಅವರಿಗೆ ಉಜ್ವಲ ಭವಿಷ್ಯವಿದೆ ಎಂದಿದ್ದಾರೆ.
ಕಡಾಡಿ ಅವರ ಪಕ್ಷ ನಿಷ್ಠೆಯನ್ನು ಗುರುತಿಸಿ ರಾಜ್ಯಸಭೆಗೆ ಅವಕಾಶ ನೀಡಿರುವುದಕ್ಕೆ ಬಿಜೆಪಿ ಕೇಂದ್ರ ಹಾಗೂ ರಾಜ್ಯ ನಾಯಕರಿಗೆ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ