Belagavi NewsBelgaum NewsKannada NewsKarnataka NewsNationalPolitics

*ಗಂಗಾ ನದಿಯಲ್ಲಿ ದೋಣಿ ಮುಳುಗಿ ದುರಂತ: 13 ಮಂದಿ ಸಾವು*

ಪ್ರಗತಿವಾಹಿನಿ ಸುದ್ದಿ: ಗಂಗಾ ನದಿಯಲ್ಲಿ ದೋಣಿ ಮಗುಚಿಬಿದ್ದ ಪರಿಣಾಮ ಕನಿಷ್ಠ 13 ಮಂದಿ ಮೃತಪಟ್ಟಿರುವ ಘಟನೆ ಸಂಭವಿಸಿದೆ. 

ದುರಂತದಲ್ಲಿ ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳೇ ಇದ್ದಾರೆ. ಘಟನೆ ಇಡೀ ಪ್ರದೇಶದಲ್ಲಿ ಶೋಕದ ಛಾಯೆ ಮೂಡಿಸಿದೆ. ಬಿಹಾರದ ವೈಶಾಲಿ ಜಿಲ್ಲೆಯ ರಾಘೋಪುರ ದಿಯಾರಾ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಪಾಲ್ಗೊಳ್ಳಲು ಸುಮಾರು 15ರಿಂದ 20 ಮಂದಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ದೋಣಿ ಮಗುಚಿಬಿದ್ದಿದ್ದು, ಪ್ರಯಾಣಿಕರು ನೀರಿನಲ್ಲಿ ಮುಳುಗಿದ್ದಾರೆ. 

ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದು, ಅಧಿಕಾರಿಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಆರಂಭಿಸಿವೆ.

ನದಿಯಲ್ಲಿ ನಾಪತ್ತೆಯಾಗಿರುವವರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಸ್ಥಳೀಯ ಗ್ರಾಮಸ್ಥರು ಕೂಡ ರಕ್ಷಣಾ ತಂಡಗಳಿಗೆ ನೆರವಾಗುತ್ತಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಬಿಹಾರ ಮುಖ್ಯಮಂತ್ರಿ ಸಮ್ರಾಟ್ ಚೌಧರಿ, ಮೃತಪಟ್ಟವರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಹಾಗೂ ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ದುರಂತಕ್ಕೆ ದುಃಖ ವ್ಯಕ್ತಪಡಿಸಿದ್ದು, ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಹತ್ತಿರದ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಪ್ರಕಟಿಸಿದ್ದಾರೆ. 

ಸಂತ್ರಸ್ತ ಕುಟುಂಬಗಳ ದುಃಖದಲ್ಲಿ ಭಾಗಿಯಾಗಿರುವುದಾಗಿ ತಿಳಿಸಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button