
ಪ್ರಗತಿವಾಹಿನಿ ಸುದ್ದಿ: RIMS ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡಕ್ಕೆ ಇಬ್ಬರು ನವಜಾತ ಶಿಶುಗಳು ಬಲಿಯಾಗಿರುವ ಘಟನೆ ತೆಲಂಗಾಣದ ಆದಿಲಾಬಾದ್‌ನಲ್ಲಿ ನಡೆದಿದೆ.
ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ (NICU/SNCU) ಈ ಘಟನೆ ನಡೆದಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಎಸಿ ಯುನಿಟ್ ಸ್ಫೋಟಗೊಂಡಿದ್ದು, ಬಳಿಕ ವಾರ್ಡ್‌ನಲ್ಲಿ ಬೆಂಕಿ ಹಾಗೂ ದಟ್ಟ ಹೊಗೆ ಆವರಿಸಿಕೊಂಡಿದೆ.
ಘಟನೆಯ ವೇಳೆ 27ಕ್ಕೂ ಹೆಚ್ಚು ನವಜಾತ ಶಿಶುಗಳು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೂ ಐದು ದಿನದ ಹಸುಗೂಸು ಸೇರಿದಂತೆ ಇಬ್ಬರು ಶಿಶುಗಳು ಹೊಗೆಯಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಉಳಿದ ಮಕ್ಕಳನ್ನು ತಕ್ಷಣ ಸುರಕ್ಷಿತ ಸ್ಥಳಗಳಿಗೆ ಹಾಗೂ ಸಮೀಪದ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಹಾಗೂ ಆಸ್ಪತ್ರೆಯಲ್ಲಿನ ಸುರಕ್ಷತಾ ವ್ಯವಸ್ಥೆಗಳ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.



