ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇವಸ್ಥಾನಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮಾವಿನಕಟ್ಟಿ ಗ್ರಾಮದ ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ಮಂದಿರದ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಗಳಿಗೆ ಭಾನುವಾರ ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಅಡಿಗಲ್ಲು ಪೂಜೆ ನೆರವೇರಿಸಿದರು.
ಈ ದೇವಸ್ಥಾನಕ್ಕೆ ಸುಮಾರು ನೂರು ವರ್ಷಗಳ ಇತಿಹಾಸವಿದ್ದು, ದೇವಸ್ಥಾನ ಕಟ್ಟಡ ಶಿಥಿಲಾವಸ್ಥೆಯಲ್ಲಿರುವುದನ್ನು ಗಮನಿಸಿ, ಹೊಸ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕ್ಷೇತ್ರದ ನೂರಾರು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು ನೀಡುತ್ತಿದ್ದಾರೆ. ಭಾನುವಾರ ಲಕ್ಷ್ಮಿ ಹೆಬ್ಬಾಳಕರ್ ತುರ್ತು ಕೆಲಸದ ನಿಮಿತ್ಯ ಬೆಂಗಳೂರಿಗೆ ತೆರಳಿರುವುದರಿಂದ ಅವರ ಅನುಪಸ್ಥಿತಿಯಲ್ಲಿ ಪೂಜೆ ನೆರವೇರಿತು.
ಈ ವೇಳೆ ಮಾತನಾಡಿದ ಚನ್ನರಾಜ ಹಟ್ಟಿಹೊಳಿ, ದೇವಸ್ಥಾನಗಳಿಂದ ಗ್ರಾಮದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗಲಿದೆ. ಜನರೆಲ್ಲ ಒಗ್ಗಟ್ಟಿನಿಂದ ಧಾರ್ಮಿಕ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಗ್ರಾಮದ ಅಭಿವೃದ್ಧಿಗೆ ಒಟ್ಟಾಗಿ ಕೈಜೋಡಿಸಬೇಕು ಎಂದು ಕರೆನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ತಾಲೂಕು ಪಂಚಾಯಿತಿ ಸದಸ್ಯ ನೀಲೇಶ ಚಂದಗಡಕರ್, ಉಳವಪ್ಪ ಮಲ್ಲಣ್ಣವರ, ಶಂಕರಗೌಡ ರುದ್ರಗೌಡ ಪಾಟೀಲ, ರಾಜು ಅರಗಂಜಿ, ಶಂಕ್ರಯ್ಯ ಮಹಾದೇವ ಹಿರೇಮಠ, ನಾಗಪ್ಪ ಇಟಗಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ