*ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್: 8 ಕ್ರೆಸ್ಟ್ ಗೇಟ್ ಹಳು ಅಳವಡಿಕೆಗೆ ಸಿದ್ಧ*

ಪ್ರಗತಿವಾಹಿನಿ ಸುದ್ದಿ: 2025ರ ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ತೆಗೆದುಕೊಂಡ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಿತು.
ತುಂಗಭದ್ರಾ ಕ್ರಸ್ಟ್ ಗೇಟ್ ಗಳ ಬದಲಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಕ್ರೆಸ್ಟ್ ಗೇಟ್ ಗಳ ಬದಲಾವಣೆ, ನಿರ್ವಹಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ಕೇಂದ್ರ ಸರ್ಕಾರದ ಅದೀನದ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ: ಹೀಗಾಗಿ ಮಂಡಳಿಯ ಜವಾಬ್ದಾರಿ ಹೆಚ್ಚು. ಮೊದಲ ಬೆಳೆಗೆ ನೀರು ಹರಿಸುವ ಮುನ್ನ ಅಗತ್ಯ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ಮುಖ್ಯಾಂಶಗಳು…
• ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು.
• ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ.
• ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮರ್ಥ್ಯ 895.62 ಟಿಎಂಸಿ ಇದ್ದು, ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ ಸಂಗ್ರಹ ಇತ್ತು.
• ತುಂಗಾಭದ್ರಾ ಅಣೆಕಟ್ಟಿನ 32 ಕ್ರೆಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಆಗಿದ್ದು, 8ಕ್ರೆಸ್ಟ್ ಗೇಟ್ಗಳು ಅಳವಡಿಕೆಗೆ ಸಿದ್ಧವಿದೆ. ಕ್ರೆಸ್ಟ್ಗೇಟು ಬದಲಾವಣೆ ಸೇರಿದಂತೆ ಅಣೆಕಟ್ಟಿನ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವ ಕಾರ್ಯ ತುಂಗಾಭದ್ರಾ ಮಂಡಳಿಯ ವ್ಯಾಪ್ತಿಗೆ ಬರುತ್ತದೆ.
• ತುಂಗಾ ಭದ್ರಾ ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ನೀರು ಹರಿಸುವ ಪೂರ್ವದಲ್ಲೇ ಎಲ್ಲಾ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.
• ಮಳೆ ಹಾನಿಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣ ಒದಗಿಸಲು ಕ್ರಮ ಕೈಗೊಳ್ಳಬೇಕು.
• ಮುಂಗಾರು ಹಂಗಾಮಿನಲ್ಲಿ ಶೇ.98 ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ 82.50 ಲಕ್ಷ ಹೆಕ್ಟೇರ್ ಇದ್ದು, 80.76 ಲಕ್ಷ ಹೆಕ್ಟೇರ್ ವಾಸ್ತವಿಕ ಬಿತ್ತನೆಯಾಗಿದೆ.
• ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಹಾನಿ ಬಗ್ಗೆ ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, 480256 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 40407 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದ್ದು, ಒಟ್ಟು 520663 ಹೆಕ್ಟೇರ್ ಬೆಳೆ ಹಾನಿಯಾಗಿದೆ.
• ಮಳೆಗೆ ಸಂಬಂಧಿಸಿದಂತೆ ಎಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 111ಮಂದಿ ಸಾವನ್ನಪ್ಪಿದ್ದು ಎಲ್ಲಾ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದ್ದು, ಒಟ್ಟು 5.55ಕೋಟಿ ಪರಿಹಾರ ನೀಡಲಾಗಿದೆ.
• 651ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9087 ಮನೆಗಳು ಭಾಗಶಃ ಹಾನಿಯಾಗಿವೆ. ಸಂಪೂರ್ಣ ಹಾನಿಯಾದ 649 ಮನೆಗಳಿಗೆ ಹಾಗೂ ಭಾಗಶಃ ಹಾನಿಯಾದ 8608 ಮನೆಗಳಿಗೆ ಪರಿಹಾರ ಪಾವತಿಸಲಾಗಿದೆ. ಮನೆ ಹಾನಿಯಾದವರಿಗೆ ಪರಿಹಾರ ಹಾಗೂ ವಿವಿಧ ವಸತಿ ಯೋಜನೆಗಳಡಿ ಮನೆಯನ್ನು ಸಹ ಒದಗಿಸಲು ಕ್ರಮ ಕೈಗೊಳ್ಳಬೇಕು.
• ಈ ಅವಧಿಯಲ್ಲಿ ಒಟ್ಟು 766 ಜಾನುವಾರುಗಳು ಸಾವಿಗೀಡಾಗಿದ್ದು, ಒಟ್ಟು 1.52 ಕೋಟಿ ಪರಿಹಾರ ವಿತರಿಸಲಾಗಿದೆ.