
ಪ್ರಗತಿವಾಹಿನಿ ಸುದ್ದಿ: ಟಿವಿಕೆ (ತಮಿಳಿಗ ವೆಟ್ರಿ ಕಳಗಂ) ಶಾಸಕ ವಿ.ಎಸ್. ಬಾಬು ಅವರು ಹೃದಯಘಾತದಿಂದ ಇಂದು ವಿಧಿವಶರಾಗಿರುವ ಘಟನೆ ನಡೆದಿದೆ.
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೊಳತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದ ವಿ.ಎಸ್.ಬಾಬು ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವಿ.ಎಸ್. ಬಾಬು ಅವರನ್ನು ಕಳೆದ ಸೆಪ್ಟೆಂಬರ್ನಲ್ಲಿ ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 2 ತಿಂಗಳಿನಿಂದ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 2.24ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಅಧಿಕೃತ ಪ್ರಕಟಣೆ ತಿಳಿಸಿದೆ.
2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷದ ಅಭ್ಯರ್ಥಿಯಾಗಿ ಕೊಲತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಾಬು, ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಭದ್ರಕೋಟೆಯನ್ನು ಭೇದಿಸಿ ಭರ್ಜರಿ ಜಯ ಸಾಧಿಸಿದ್ದರು. ಈ ಗೆಲುವು ತಮಿಳುನಾಡು ರಾಜಕೀಯ ಇತಿಹಾಸದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿತ್ತು.
ಹಿರಿಯ ರಾಜಕಾರಣಿ ವಿ.ಎಸ್. ಬಾಬು ಅವರ ನಿಧನಕ್ಕೆ ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.




