*ಬೆಳಗಾವಿಯಲ್ಲಿ ಇಬ್ಬರು ಎಂಇಎಸ್ ಮುಖಂಡರ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಟ್ರಾಸಿಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್ ಮುಖಂಡ ಶುಭಂ ಸೆಳಕೆ ಹಾಗೂ ಮನೋಹರ್ ಹುಂದ್ರಿ ಅವರನ್ನು ಖಡೇಬಜಾರ್ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಇಬ್ಬರಿಗೂ ನವೆಂಬರ್ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧನದ ಬಳಿಕ ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಂಗ ಬಂಧನದ ಆದೇಶದ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ. 2025ರ ಜನವರಿಯಲ್ಲಿ ನಡೆದಿದ್ದ ಎಂಇಎಸ್ ಸಭೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪದ ಮೇಲೆ ರಾಜು ತಳವಾರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರೂ ಹಾಜರಾಗದ ಹಿನ್ನೆಲೆಯಲ್ಲಿ ಇದೀಗ ಇಬ್ಬರನ್ನು ಬಂಧಿಸಲಾಗಿದೆ.
ತಮ್ಮ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಶುಭಂ ಸೆಳಕೆ, ಪೊಲೀಸರು ಯಾವುದೇ ನೋಟಿಸ್ ನೀಡದೆ ಬಂಧಿಸಿದ್ದಾರೆ ಎಂದು ಆರೋಪಿಸಿದ್ದಾರೆ. ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದಂದು ಎಂಇಎಸ್ ಹಮ್ಮಿಕೊಳ್ಳಲು ಉದ್ದೇಶಿಸಿರುವ ಕರಾಳ ದಿನಾಚರಣೆಯನ್ನು ತಡೆಯುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೂರಿದ್ದಾರೆ.
ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮರಾಠಿಗರ ಹೋರಾಟಕ್ಕೆ ಅಡ್ಡಿಪಡಿಸಲು ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಅವರು, ತಮ್ಮ ಬಂಧನದಿಂದ ಹೋರಾಟ ನಿಲ್ಲುವುದಿಲ್ಲ ಎಂದಿದ್ದಾರೆ.
ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಎಂಇಎಸ್ ಕರಾಳ ದಿನಾಚರಣೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಇಬ್ಬರು ಮುಖಂಡರ ಬಂಧನ ಬೆಳಗಾವಿಯಲ್ಲಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



