
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಉಮರ್ ಖಾಲಿದ್ ರಾಷ್ಟ್ರೀಯವಾದಿ ಅವರ ಬಗ್ಗೆ ಮಾತನಾಡುವ ನೈತಿಕತೆ ಎಬಿವಿಪಿಗಿಲ್ಲ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೊಸ ವಿವಾದ ಸೃಷ್ಟಿಸಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ನಲ್ಲಿ ಉಮರ್ ಖಾಲಿದ್ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವಿಚಾರಕ್ಕೆ ವಿಧಾನಸೌಧದಲ್ಲಿಮಾತನಾಡಿದ ಬಿ.ಕೆ.ಹರಿಪ್ರಸಾದ್, ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ರಾಷ್ಟ್ರವಾದಿ. ನಾಥೂರಾಮ್ ಗೋಡ್ಸೆಯನ್ನು ಆರಾಧಿಸುವ ಎಬಿವಿಪಿಗೆ ಅವರ ಬಗ್ಗೆ ಮಾತನಾಡುವ ಯಾವುದೇ ಹಕ್ಕಿಲ್ಲ ಎಂದರು.
ಗೋಡ್ಸೆ ದೇಶವಿರೋಧಿ ಮತ್ತು ದೇಶದ ಮೊದಲ ಭಯೋತ್ಪಾದಕ. ಹೀಗಾಗಿ ಎಬಿವಿಪಿಗೆ ಉಮರ್ ಖಾಲಿದ್ ವಿರೋಧಿಸುವ ನೈತಿಕ ಹಕ್ಕೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಲಲಿತ್ ವಚಾನಿ ನಿರ್ದೇಶಿಸಿರುವ ‘Prisoner No 626710 is Present’ ಸಾಕ್ಷ್ಯಚಿತ್ರದ ಪ್ರದರ್ಶನದ ಕುರಿತು ಚರ್ಚೆ ನಡೆಯುತ್ತಿದೆ. ಉಮರ್ ಖಾಲಿದ್ ಅವರನ್ನು ಕೇಂದ್ರವಾಗಿಟ್ಟುಕೊಂಡಿರುವ ಈ ಸಾಕ್ಷ್ಯಚಿತ್ರವನ್ನು ಎನ್ಎಲ್ಎಸ್ಐಯುನಲ್ಲಿ ಪ್ರದರ್ಶಿಸಲು ಉದ್ದೇಶಿಸಲಾಗಿತ್ತು. ಆದರೆ ಬಳಿಕ ಪ್ರದರ್ಶನವನ್ನು ಮುಂದೂಡಲಾಗಿದೆ. ಸುರಕ್ಷಿತ ಮತ್ತು ಜವಾಬ್ದಾರಿಯುತ ರೀತಿಯಲ್ಲಿ ಪ್ರದರ್ಶನ ನಡೆಸಲು ಸಾಧ್ಯವಾಗುವಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರದ ಪ್ರಸ್ತಾವಿತ ಪ್ರದರ್ಶನವನ್ನು ಶಾಶ್ವತವಾಗಿ ರದ್ದುಗೊಳಿಸಲು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಎಬಿವಿಪಿ ಮನವಿ ಮಾಡಿದೆ. ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಎನ್ಎಲ್ಎಸ್ಐಯು ಆಡಳಿತದ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿದೆ. ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ ಹರಿಪ್ರಸಾದ್, ಉಮರ್ ಖಾಲಿ ಒಬ್ಬ ದೇಶ ಭಕ್ತ ಎಂದಿದ್ದಾರೆ.
2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ದೊಡ್ಡ ಪಿತೂರಿ ಪ್ರಕರಣದಲ್ಲಿ ದೆಹಲಿ ಪೊಲೀಸರು ಉಮರ್ ಖಾಲಿದ್ ನನ್ನು ಬಂಧಿಸಿದ್ದರು. ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (UAPA) ಸೇರಿದಂತೆ ವಿವಿಧ ಕಾನೂನುಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 2020ರ ಸೆಪ್ಟೆಂಬರ್ನಿಂದ ಉಮರ್ ಖಾಲಿದ್ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ತಮ್ಮ ವಿರುದ್ಧದ ಆರೋಪಗಳನ್ನು ಉಮರ್ ಖಾಲಿದ್ ನಿರಾಕರಿಸಿದ್ದಾರೆ.



