Belagavi NewsBelgaum NewsKannada NewsKarnataka News

*ಬೆಳಗಾವಿಯ ವಸತಿ ನಿಲಯಗಳಿಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನಗರದ ರಾಮತೀರ್ಥ ನಗರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮುರಾರ್ಜಿ ದೇಸಾಯಿ ಬಾಲಕ ಮತ್ತು ಬಾಲಕಿಯರ ವಸತಿ ಶಾಲೆ ಹಾಗೂ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ವಸತಿ ನಿಲಯಗಳಲ್ಲಿನ ಮೂಲಸೌಕರ್ಯ, ವಿದ್ಯಾರ್ಥಿಗಳ ವಾಸ್ತವ್ಯ ವ್ಯವಸ್ಥೆ, ಹಾಸಿಗೆ, ಹೊದಿಕೆ, ಕಟ್ಟಡಗಳ ನಿರ್ವಹಣೆ, ಸ್ವಚ್ಛತೆ, ಶೌಚಾಲಯ ಹಾಗೂ ಅಡುಗೆ ಕೋಣೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು.

ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ದಿನಸಿ ಸಾಮಗ್ರಿಗಳ ಸಂಗ್ರಹಣೆ, ಹಾಲು, ಅಡುಗೆ ಎಣ್ಣೆ ಹಾಗೂ ತರಕಾರಿಗಳ ಗುಣಮಟ್ಟದ ಕುರಿತು ಮಾಹಿತಿ ಪಡೆದರು. ನಿಗದಿತ ಆಹಾರ ಮೆನುವಿನಂತೆ ಊಟ ನೀಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದ ಅವರು, ಅಲ್ಪಾಹಾರ ಸೇವಿಸಿ ಆಹಾರದ ಗುಣಮಟ್ಟವನ್ನೂ ಖುದ್ದಾಗಿ ಪರೀಕ್ಷಿಸಿದರು.

ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುವ ಅಡುಗೆ ಸಿಬ್ಬಂದಿಗೆ ಮಾಸಿಕ ವೇತನವನ್ನು ಸಕಾಲದಲ್ಲಿ ಪಾವತಿಸಬೇಕು. ಅರ್ಹತೆ ಮತ್ತು ಮೆರಿಟ್ ಆಧಾರದ ಮೇಲೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ ಎಲ್ಲ ವಸತಿ ನಿಲಯಗಳಲ್ಲಿ ಲೋಕಾಯುಕ್ತ ದೂರು ಸಲ್ಲಿಕೆ ಹಾಗೂ ಸಂಪರ್ಕ ವಿವರಗಳನ್ನು ಒಳಗೊಂಡ ಮಾಹಿತಿ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗದಂತೆ ನೋಡಿಕೊಂಡು, ಅವರು ನಿರ್ಭೀತಿಯಿಂದ ವಾಸಿಸಲು ಹಾಗೂ ಕಲಿಯಲು ಪೂರಕವಾದ ಸ್ನೇಹಪರ ವಾತಾವರಣ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್. ಶಿವಕುಮಾರ್, ಬೆಳಗಾವಿ ಲೋಕಾಯುಕ್ತ ಅಧೀಕ್ಷಕ ಪ್ರಸನ್ನ ದೇಸಾಯಿ, ಲೋಕಾಯುಕ್ತ ಉಪ ನಿಬಂಧಕ ಅರವಿಂದ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Back to top button