*ಡಿವೈಡರ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು*: *5 ಮಂದಿ ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಈ ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿದ್ದಾರೆ.
ಹರಿಯಾಣದಿಂದ ಉತ್ತರಾಖಂಡದ ಹರಿದ್ವಾರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಭೀಕರ ದುರಂತ ಸಂಭವಿಸಿದೆ. ಜಗಾಹೇಡಿ ಗ್ರಾಮದ ಸಮೀಪ ಕಾರು ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ರಸ್ತೆಯ ಮೇಲೆ ಪಲ್ಟಿಯಾಗಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾರನ್ನು ಆವರಿಸಿದೆ. ಕಾರಿನಲ್ಲಿದ್ದವರಿಗೆ ಹೊರಬರಲು ಸಾಧ್ಯವಾಗದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾರೆ. ರಸ್ತೆಯಲ್ಲಿ ಸಂಚರಿಸುತ್ತಿದ್ದವರೂ ಬೆಂಕಿಯ ತೀವ್ರತೆಯಿಂದ ಅಸಹಾಯಕರಾಗಿ ನೋಡುತ್ತಿದ್ದ ಘಟನೆ ಉತ್ತರ ಪ್ರದೇಶದ ಮುಜಫ್ಫರ್ನಗರ ಜಿಲ್ಲೆಯ ತಿತಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಸಾಕಷ್ಟು ಹರಸಾಹಸ ಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ಕಾರಿನೊಳಗೆ ಸಿಲುಕಿದ್ದ ಐದು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬೆಂಕಿಯ ತೀವ್ರತೆಗೆ ಮೃತದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮೃತದೇಹಗಳನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಕಾರಿನಲ್ಲಿದ್ದವರು ಹರಿಯಾಣದ ಜಿಂದ್ ಜಿಲ್ಲೆಯ ನಿವಾಸಿಗಳು ಎಂದು ತಿಳಿದುಬಂದಿದೆ. ಇವರೆಲ್ಲರೂ ಜಿಂದ್ನಿಂದ ಹರಿದ್ವಾರದ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಮಹಾಡಿಕ್ ಹಾಗೂ ಫುಗಾನಾ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




