
ಪ್ರಗತಿವಾಹಿನಿ ಸುದ್ದಿ: ಕಾಸರಕೋಡದಲ್ಲಿ ಬಂದರು ನಿರ್ಮಾಣ ವಿರೋಧಿಸಿ ಸ್ಥಳೀಯರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೋರಾಟದಲ್ಲಿ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು ಪಲ್ಗೊಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡಲ್ಲಿ ಬಂದರು ನಿರ್ಮಾಣಕ್ಕೆ ಖಾಸಗಿ ಕಂಪನಿ ಮುಂದಾಗಿದ್ದು, ಮೀನುಗಾರರು , ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ವಿರೋಧದ ನಡುವೆಯೂ ಜಿಲ್ಲಾಡಳಿತ ಹಾಗೂ ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳು ಸರ್ವೆ ಕಾರ್ಯ ಆರಂಭಿಸಿದ್ದಾರೆ. ಸರ್ವೆಗೆ ಅಡ್ಡಿಯಾಗಬಾರದೆಂದು ಕಾಸರಕೋಡ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಂದರು ನಿರ್ಮಾಣ ಸರ್ವೆ ಕಾರ್ಯ ವಿರೋಧಿಸಿ ನಿನ್ನೆ ಅಂಕೋಲಾದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಇಂದು ಹೊನ್ನಾವರದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಹೋರಾಟ ಉಗ್ರಸ್ವರೂಪ ಪಡೆದಿದೆ.
ಕಾಸರಕೋಡ ಟೊಂಕಾ ಸಮುದ್ರ ತೀರದ ರಸ್ತೆ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆ ಸಾಗಿದ್ದು, ಪ್ರತಿಭಟನೆಯಲ್ಲಿ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಸರ್ವೆ ಕಾರ್ಯ ಸ್ಥಗಿತಗೊಳಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಈ ವೇಳೆ ಪೊಲೀಸರು ಹಲವು ಪ್ರತಿಭಟನಾಕರರನ್ನು ವಶಕ್ಕೆ ಪಡೆದಿದ್ದಾರೆ.
ಇದರಿಂದ ರೊಚ್ಚಿಗೆದ್ದ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಓರ್ವ ಮಹಿಳೆ ಸಮುದ್ರಕ್ಕೆ ಹಾರಿದ್ದಾರೆ. ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಇತರರು ಮಹಿಳೆಯನ್ನು ರಕ್ಷಿಸಿದ್ದಾರೆ. ಆದರೆ ನೀರಿಗೆ ಬಿದ್ದ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ