ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶುಕ್ರವಾರ ರಾಜ್ಯದ ವಿವಿಧ ಸಚಿವರು ಬೆಳಗಾವಿಗೆ ಆಗಮಿಸುತ್ತಿದ್ದಾರೆ.
ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 3 ದಿನಗಳ ಕಾಲ ಬೆಳಗಾವಿ ಜಿಲ್ಲೆಯ ಪ್ರವಾಸದಲ್ಲಿದ್ದಾರೆ.
ಇವರ ಜೊತೆಗೆ ಶುಕ್ರವಾರ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ ಸಹ ಬೆಳಗಾವಿಗೆ ಆಗಮಿಸಲಿದ್ದಾರೆ.
ಕಂದಾಯ ಸಚಿವ ಕೃಷ್ಣ ಭೈರೇಗೌಡ ಶುಕ್ರವಾರ ಸುವರ್ಣ ವಿಧಾನಸೌಧದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬೆಳಗಾವಿ ವಿಭಾಗದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ್ ಸಹ ಭಾಗವಹಿಸಲಿದ್ದಾರೆ. ಜೊತೆಗೆ ಜಿಲ್ಲೆಯ ಸಂಸದರು, ಶಾಸಕರು ಸಹ ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ ಅವರು ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ನಂತರ ಬೆಂಗಳೂರಿಗೆ ತೆರಳುವರು.
ಉನ್ನತ ಶಿಕ್ಷಣ ಸಚಿವ ಸುಧಾಕರ ಅವರು ಬೆಳಗ್ಗೆ 11 ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದು, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ 2.30ಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ರಾತ್ರಿ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವರು.
ಸಚಿವ ಮಲ್ಲಿಕಾರ್ಜುನ ಅವರು ಗುರುವಾರ ಸಂಜೆ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ಶುಕ್ರವಾರವೂ ಬೆಳಗಾವಿಯಲ್ಲೇ ಇರಲಿದ್ದಾರೆ. ಶನಿವಾರ ಬಾಗಲಕೋಟೆಗೆ ತೆರಳಿ ತೋಟಗಾರಿಕೆ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವರು. ರಾತ್ರಿ ಬೆಳಗಾವಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದು, ಭಾನುವಾರವೂ ಬೆಳಗಾವಿಯಲ್ಲೇ ಇರಲಿದ್ದಾರೆ. ಭಾನುವಾರ ರಾತ್ರಿ ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವರು.
ಇವರಲ್ಲದೆ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಎಚ್.ವಿಶ್ವನಾಥ ಸಹ ಶುಕ್ರವಾರ ಬೆಳಗಾವಿಗೆ ಆಗಮಿಸುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ