ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ರಾಜಧಾನಿ ಬೆಂಗಳೂರು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿವೆ. ರಾಜಭವನದ ಎದುರು ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಕಾರರು ರಾಜಭವನಕ್ಕೆ ನುಗ್ಗಲು ಯತ್ನಿಸಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ತಿರುರುಗುತ್ತಿದ್ದಂತೆ ಪೊಲೀಸರು ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಇನ್ನೊಂದೆಡೆ ಮಂಡ್ಯದಲ್ಲಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಡಿಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಮಂಡ್ಯದ ಕೆ.ಆರ್.ಎಸ್.ಜಲಾಶಯದ ಬಳಿ ಪ್ರತಿಭಟನೆ ನಡೆಸಿದ ರೈತ ಮೋರ್ಚಾ ಕಾರ್ಯಕರ್ತರು ಬಳಿಕ ಕೆ.ಆರ್.ಎಸ್ ಡ್ಯಾಂ ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು, ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ