Kannada NewsKarnataka NewsLatestPolitics

*50 ಸಾವಿರ ಕೋಟಿ ಹೂಡಿಕೆ, ರಾಜ್ಯದಲ್ಲಿ 58 ಸಾವಿರ ಉದ್ಯೋಗಸೃಷ್ಟಿ: ಅಂಕಿ-ಅಂಶಗಳ ಸಮೇತ ವಿವರಿಸಿದ ಸಚಿವರು *

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 241 ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹50,025 ಕೋಟಿ ಬಂಡವಾಳ ಹರಿದುಬಂದಿದೆ. ಇವುಗಳ ಮೂಲಕ 58,051 ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಕೇಶವಪ್ರಸಾದ್ ಮಂಗಳವಾರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಏಕಗವಾಕ್ಷಿ ಅನುಮೋದನಾ ಸಮಿತಿಯು ಹಸಿರು ನಿಶಾನೆ ನೀಡಿರುವ ಈ ಯೋಜನೆಗಳ ಪೈಕಿ 24 ಯೋಜನೆಗಳು ಮಾತ್ರ ಬೆಂಗಳೂರು ಜಿಲ್ಲೆಯಲ್ಲಿದ್ದು, ಉಳಿದ 217 ಯೋಜನೆಗಳು ಹೊರಗಿನ ಜಿಲ್ಲೆಗಳಲ್ಲಿವೆ. ಬೆಂಗಳೂರು ಜಿಲ್ಲೆಯಲ್ಲಿ 21,537 ಕೋಟಿ ರೂ. ಹೂಡಿಕೆ ಆಗುತ್ತಿದ್ದು, 19,243 ಉದ್ಯೋಗ ಸೃಷ್ಟಿ ಆಗಲಿವೆ. ಉಳಿದ ಜಿಲ್ಲೆಗಳಲ್ಲಿ 28,488 ಕೋಟಿ ರೂ. ಬಂಡವಾಳ ಹೂಡಿಕೆ ಆಗುತ್ತಿದ್ದು, 38,808 ಮಂದಿಗೆ ಉದ್ಯೋಗ ಸಿಗಲಿವೆ ಎಂದು ಅವರು ಅಂಕಿಅಂಶಗಳ ಸಮೇತ ವಿವರಿಸಿದರು.

ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಮಿಕ್ಕ ಭಾಗಗಳಲ್ಲಿ ಉದ್ದಿಮೆಗಳು ನೆಲೆಯೂರಿ, ಉದ್ಯೋಗ ಸೃಷ್ಟಿಯಾಗುವಂತೆ ಮಾಡಲು ಸರಕಾರವು ಬಿಯಾಂಡ್ ಬೆಂಗಳೂರು ಉಪಕ್ರಮವನ್ನು ಆರಂಭಿಸಿದ್ದು, ವಿವಿಧೆಡೆಗಳಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಇದಕ್ಕಾಗಿ ಕೈಗಾರಿಕಾ ನೀತಿಯಲ್ಲಿ ಹಲವು ಪ್ರೋತ್ಸಾಹಧನ ಮತ್ತು ವಿನಾಯಿತಿಗಳನ್ನು ನೀಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.

ಮೈಸೂರು ಲ್ಯಾಂಪ್ಸ್: ಖಾಸಗಿ ಒಡೆತನದ ಷೇರು ಖರೀದಿಗೆ ಕ್ರಮ:

ಸರ್ಕಾರಿ ಸ್ವಾಮ್ಯದ ಮೈಸೂರು ಲ್ಯಾಂಪ್ಸ್ ಕಂಪನಿಯಲ್ಲಿ ಶೇ5.6ರಷ್ಟು ಷೇರುಗಳು ಖಾಸಗಿಯವರ ಒಡೆತನದಲ್ಲಿದ್ದು ಅಷ್ಟೂ ಷೇರುಗಳನ್ನು ಸರ್ಕಾರವೇ ಖರೀದಿ ಮಾಡಿ ಸಂಸ್ಥೆಯನ್ನು ಶೇ 100ರಷ್ಟು ಸರ್ಕಾರಿ ಸಂಸ್ಥೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ವಿಧಾನ ಪರಿಷತ್ ಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಎಸ್.ಎಲ್.ಬೋಜೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಮೈಸೂರು ಲ್ಯಾಂಪ್ಸ್ಗೆ ಸಂಬಂಧಿಸಿದಂತೆ ಸರ್ಕಾರ ಹೆಚ್ಚು ಜಾಗರೂಕತೆಯ ಹೆಜ್ಜೆಗಳನ್ನು ಇಡುತ್ತಿದ್ದು, ಅದರ ಆಸ್ತಿ ಯಾವುದೇ ಖಾಸಗಿ ವ್ಯಕ್ತಿ/ಸಂಸ್ಥೆಗಳ ಪಾಲಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸದ್ಯ ಈ ಕಂಪನಿಯಲ್ಲಿ ಸರ್ಕಾರದ ಷೇರು ಪ್ರಮಾಣ ಶೇ 91.07ರಷ್ಟು ಇದೆ. ಸರ್ಕಾರಿ ಸ್ವಾಮ್ಯದ ಎನ್‌ಜಿಇಎಫ್ ಸಂಸ್ಥೆ ಶೇ 3.33ರಷ್ಟು ಷೇರು ಬಂಡವಾಳ ಹೊಂದಿದೆ. ಉಳಿದ ಶೇ 5.6ರಷ್ಟು ಷೇರು ಬಂಡವಾಳ ಸಾರ್ವಜನಿಕರದ್ದಾಗಿದೆ ಎಂದು ಅವರು ವಿವರಿಸಿದರು.


ಮೈಸೂರು ಲ್ಯಾಂಪ್ಸ್ ಮತ್ತು ಎನ್‌ಜಿಇಎಫ್ ಸಂಸ್ಥೆಗೆ ಸೇರಿದ ಜಾಗಗಳಲ್ಲಿ ಸಾರ್ವಜನಿಕ ಉದ್ದೇಶದ ವಿನೂತನ ಯೋಜನೆಗಳನ್ನು ಅನುಷ್ಠಾನಗೊಳಿಸಲು 2021ರಲ್ಲಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಲಾಗಿತ್ತು. ಸರ್ಕಾರದ ಮುಖ್ಯ ಕಾರ್ಯದರ್ಶಿ ಇದರ ಅಧ್ಯಕ್ಷರಾಗಿದ್ದಾರೆ. ಇವರಲ್ಲದೆ, ಸರ್ಕಾರದ ಕಡೆಯಿಂದ ಏಳು ಮತ್ತು ನಾಗರಿಕರ ವಲಯದಿಂದ ಐದು ಟ್ರಸ್ಟಿಗಳನ್ನು ನೇಮಿಸಲು ಅವಕಾಶ ಇದೆ. ಇದುವರೆಗೂ ಈ ಟ್ರಸ್ಟ್ ಗೆ ಯಾವುದೇ ಚಟುವಟಿಕೆಗಳನ್ನು ಸರ್ಕಾರದ ಕಡೆಯಿಂದ ವಹಿಸಿರುವುದಿಲ್ಲ ಎಂದು ಅವರು ವಿವರಿಸಿದರು.


ಮೊದಲ ಆದ್ಯತೆ ಕಂಪನಿಯನ್ನು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಸಂಸ್ಥೆಯನ್ನಾಗಿ ಮಾಡುವುದು. ಅದರ ನಂತರವೇ ಅದರ ಅಸ್ತಿಗಳನ್ನು ಸಾರ್ವಜನಿಕ ಉದ್ದೇಶಗಳಿಗೆ ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡಲಾಗುವುದು. ಒಟ್ಟಿನಲ್ಲಿ ಖಾಸಗಿಯವರಿಗಂತೂ ಕೊಡುವುದಿಲ್ಲ ಎಂದು ತಿಳಿಸಿದರು.

Related Articles

Back to top button