ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಕಲಾಪ ಬಲಿಯಾಗಿದೆ. ನಿನ್ನೆಯಿಂದ ಸಿಡಿ ವಿಚಾರ ಕೈಗೆತ್ತಿಕೊಂಡು ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಸದಸ್ಯರು ಇಂದು ಕೂಡ ಧರಣಿ ಮುಂದುವರೆಸಿದ್ದಾರೆ.
ಬೆಳಿಗ್ಗೆ ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು ಸಿಡಿ ಪ್ರದರ್ಶಿಸಿ, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಗದ್ದಲ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ 10 ನಿಮಿಷ ಕಾಲ ಮುಂದೂಡಿದರು. ಮತ್ತೆ ಕಲಾಪ ಆರಂಭವಾದಾಗಲೂ ವಿಪಕ್ಷ ಕಾಂಗ್ರೆಸ್ ಸದಸ್ಯರು ಕಲಾಪಕ್ಕೆ ಅಡ್ಡಿ ಪಡಿಸಿದ್ದು, ಸದನದಲ್ಲಿ ಧರಣಿ ಮುಂದುವರೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಗದ್ದಲ-ಕೋಲಾಹಲ ಆರಂಭವಾಗುತ್ತಿದ್ದಂತೆ ಸ್ಪೀಕರ್ ವಿಧಾನಸಭಾ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು.
ಭೋಜನ ವಿರಾಮದ ಬಳಿಕ ಕಲಾಪ ಆರಂಭವಾದಾಗಲೂ ಕಾಂಗ್ರೆಸ್ ಸದಸ್ಯರು ಮತ್ತೆ ಸಿಡಿ ವಿಚಾರವಾಗಿ ಪ್ರತಿಭಟನೆ ಮುಂದುವರೆಸಿದರು. ಪ್ರಕರಣವನ್ನು ಹೈಕೋರ್ಟ್ ಮುಖ್ಯನ್ಯಾಧೀಶರ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಇದೇ ವೇಳೆ 6 ಸಚಿವರ ರಾಜೀನಾಮೆಗೂ ಪಟ್ಟು ಹಿಡಿದು ಧರಣಿ ನಡೆಸಿದರು.
ಇನ್ನೊಂದೆಡೆ ಜೆಡಿಎಸ್ ಸದಸ್ಯರು ಚರ್ಚೆಗೆ ಅವಕಾಶ ನೀಡುತ್ತಿಲ್ಲವೆಂದು ಸಭಾತ್ಯಾಗ ಮಾಡಿದರು. ಕಾಂಗ್ರೆಸ್ ಪ್ರತಿಭಟನೆ, ಜೆಡಿಎಸ್ ಸಭಾತ್ಯಾಗದ ನಡುವೆಯೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೂರಕ ಅಂದಾಜು ಮಂಡನೆ ಮಾಡಿದರು. ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಂತೆ ಸ್ಪೀಕರ್ ಕಾಗೇರಿ ಕಲಾಪವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಮುಂದೂಡಿದರು.
ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸಿ ತನಿಖೆ ನಡೆಸಲಿ; ಸಿದ್ದರಾಮಯ್ಯ ಆಗ್ರಹ
ವಿಧಾನಸಭೆಯಲ್ಲಿ ಸಿಡಿ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ