ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ವಿಜಯಲಕ್ಷ್ಮೀ ದರ್ಶನ್, ದರ್ಶನ್ ಸಹೋದರ ದಿನಕರ್, ನಿರ್ದೇಶಕ ಪ್ರೇಮ್ ಇಂದು ಬೆಂಗಳೂರಿನ ಸದಾಶಿವ ನಗರ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಚಾರ್ಜ್ ಶೀಟ್ ಕೂಡ ಸಿದ್ಧವಾಗುತ್ತಿರುವ ಸಂದರ್ಭದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಡಿಸಿಎಂ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಕೇಳಲು ವಿಜಯಲಕ್ಷ್ಮಿ ಭೇಟಿ: ಡಿಸಿಎಂ ಡಿ.ಕೆ.ಶಿವಕುಮಾರ್
“ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಸಂಬಂಧ ನನ್ನನ್ನು ಭೇಟಿ ಮಾಡಿದ್ದರು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸಕ್ಕೆ ವಿಜಯಲಕ್ಷ್ಮಿ ಅವರು ಬಂದ ಕಾರಣ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಉತ್ತರಿಸಿದ ಶಿವಕುಮಾರ್ ಅವರು “ದರ್ಶನ್, ವಿಜಯಲಕ್ಷ್ಮೀ ಪುತ್ರ ಈ ಮೊದಲು ನಮ್ಮ ಶಾಲೆಯಲ್ಲಿ ಓದುತ್ತಿದ್ದರು. ಕಾರಣಾಂತರಗಳಿಂದ ನಮ್ಮ ಶಾಲೆ ತೊರೆದು ಬೇರೆ ಶಾಲೆ ಸೇರಿದ್ದರು. ಈಗ ಮತ್ತೆ ಮರಳಿ ನಮ್ಮ ಶಾಲೆಗೆ ಸೇರಿಸಿಕೊಳ್ಳುವಂತೆ ಮನವಿ ಮಾಡಲು ಬಂದಿದ್ದರು. ನಮ್ಮ ಶಾಲೆಯ ಪ್ರಾಂಶುಪಾಲರು ಪ್ರವೇಶ ಅವಕಾಶ ನಿರಾಕರಿಸಿದ್ದರಿಂದ ನನ್ನ ಬಳಿ ಸೀಟು ಕೇಳಲು ಬಂದಿದ್ದರು” ಎಂದು ಹೇಳಿದರು.
“ಶಾಲೆಯ ದಾಖಲಾತಿಗೆ ಒಂದಷ್ಟು ನಿಯಮಾವಳಿಗಳಿವೆ. ನಾನು ಶಾಲೆಗೆ ಅಷ್ಟಾಗಿ ಭೇಟಿ ನೀಡುತ್ತಿಲ್ಲ. ಶಾಲೆಯ ಆಡಳಿತ ಜವಾಬ್ದಾರಿಯನ್ನು ಸಂಪೂರ್ಣವಾಗಿ ಮಕ್ಕಳಿಗೆ ವಹಿಸಿದ್ದೇನೆ. ವಿಜಯಲಕ್ಷ್ಮಿ ಅವರು ಮಗನ ಭವಿಷ್ಯದ ದೃಷ್ಟಿಯಿಂದ ಬಂದಿದ್ದರು. ಜತೆಗೆ ನಮ್ಮ ಶಾಲೆಯ ಪಕ್ಕದಲ್ಲೇ ಅವರ ನಿವಾಸವಿದೆ. ನಾನು ಆ ಮಗುವಿಗೆ ಒಳ್ಳೆಯದಾಗಲಿ ಎಂದು ಪ್ರಾಂಶುಪಾಲರನ್ನು ಭೇಟಿ ಮಾಡಲು ಹೇಳಿದ್ದೇನೆ”ಎಂದರು.
ವಿಜಯಲಕ್ಷ್ಮಿ ಅವರು ನೆರವು ಕೇಳಿದರೆ ಸಹಾಯ ಮಾಡುವಿರಾ ಎಂದಾಗ “ನಾವು ಸಾರ್ವಜನಿಕ ಜೀವನದಲ್ಲಿದ್ದೇವೆ. ನನ್ನ ಭೇಟಿ ಮಾಡಲು ಬಂದವರನ್ನು ಬೇಡ ಎಂದು ಹೇಗೆ ನಿರಾಕರಣೆ ಮಾಡಲಿ? ಅಲ್ಲದೇ ನಮ್ಮ ಶಾಲೆಯ ಪಕ್ಕದಲ್ಲೇ ಅವರ ಮನೆಯಿದೆ. ನಮ್ಮ ಲೋಕಸಭಾ ಕ್ಷೇತ್ರದಲ್ಲೇ ಅವರ ಮನೆಯಿದೆ. ನನ್ನನ್ನು ಭೇಟಿ ಮಾಡಲು ನೂರಾರು ಜನ ಬಂದಿದ್ದಾರೆ. ನೀವು (ಮಾಧ್ಯಮದವರು) ಕೂಡ ಬಂದಿದ್ದೀರಿ. ನಿಮ್ಮ ಭೇಟಿಗೆ ನಿರಾಕರಿಸಿದರೆ ಡಿ.ಕೆ. ಶಿವಕುಮಾರ್ ದುರಹಂಕಾರಿ, ಭೇಟಿ ಮಾಡದೆ ತೆರಳಿದರು ಎನ್ನುತ್ತೀರಿ. ಸಾರ್ವಜನಿಕ ಜೀವನದಲ್ಲಿ ಇದ್ದಾಗ ಸಹಾಯ ಕೇಳಿಕೊಂಡು ನನ್ನನ್ನು ಭೇಟಿ ಮಾಡಲು ಬಂದರೆ ಅವರನ್ನು ಭೇಟಿ ಮಾಡಬೇಕಾಗುತ್ತದೆ. ಅದು ನನ್ನ ಕರ್ತವ್ಯ ಕೂಡ” ಎಂದು ಹೇಳಿದರು.
“ಆ ಹೆಣ್ಣುಮಗಳಿಗೆ ತನ್ನ ಮಗನ ಶಿಕ್ಷಣದ ಬಗ್ಗೆ ಕಾಳಜಿಯಿದೆ. ಎಲ್ಲಾ ಮಕ್ಕಳು ಒಂದೇ ಅಲ್ಲವೇ? ಅವರಿಗೆ ಮಗನ ಶಿಕ್ಷಣದ ಬಗ್ಗೆ ಇರುವ ಕಾಳಜಿ ನೋಡಿ ಬಹಳ ಸಂತೋಷವಾಯಿತು. ಬೇರೆ ಶಾಲೆಗೆ ಸೇರಿಸಿದರೆ ಮಾನಸಿಕವಾಗಿ ತೊಂದರೆಯಾಗಬಹುದು. ನಮ್ಮ ಶಾಲೆಗೆ ಸೇರಿಸಿದರೆ ಹತ್ತಿರದಲ್ಲೇ ಇರುವುದರಿಂದ ಹೋಗಿ ಬರಲು ಅನುಕೂಲ ಆಗುತ್ತದೆ. ಈ ಹಿಂದೆ ಪೋಷಕರ ಸಭೆಗೆ ಅವರನ್ನು ಕರೆಸಲಾಗಿತ್ತು. ಆ ವೇಳೆ ದರ್ಶನ್ ಕೂಡ ಬಂದಿದ್ದರು” ಎಂದರು.
ಕಾನೂನಿನ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ:
ನಟ ದರ್ಶನ್ ಗೆ ಅನ್ಯಾಯ ಆಗಿದ್ದರೆ ನ್ಯಾಯ ಕೊಡಿಸಲಾಗುವುದು ಎಂದು ರಾಮನಗರದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಮಾಧ್ಯಮದವರು ಕೇಳಿದಾಗ, “ನಿನ್ನೆ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ, ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಬಂದಿದ್ದರು. ಎಲ್ಲೆಂದರಲ್ಲಿ ಭೇಟಿ ಮಾಡಲು ಸಾಧ್ಯವಿಲ್ಲ. ಮನೆಗೆ ಬಂದು ಭೇಟಿ ಮಾಡಿ ಎಂದು ಇಂದು ಬೆಳಗ್ಗೆ ಸಮಯಾವಕಾಶ ನೀಡಿದ್ದೆ. ಅವರು ನಿನ್ನೆ ಭೇಟಿಗೆ ಯತ್ನಿಸಿದಾಗ ಬಹುಶಹ ದರ್ಶನ್ ಪ್ರಕರಣದ ವಿಚಾರವಾಗಿ ಮಾತನಾಡಲು ಬರುತ್ತಾರೆ ಎಂದು ಭಾವಿಸಿದ್ದೆ” ಎಂದರು.
“ಮಂಗಳವಾರ ರಾತ್ರಿ ರಾಮನಗರದಲ್ಲಿ ನಡೆದ ಚಾಮುಂಡೇಶ್ವರಿ ಕರಗ ಸಮಾರಂಭದಲ್ಲಿ ನೆರೆದಿದ್ದ ಯುವಕರು ದರ್ಶನ್ ಮೇಲಿನ ಅಭಿಮಾನದಿಂದ ನ್ಯಾಯ ಕೊಡಿಸಿ ಎಂದು ಗಲಾಟೆ ಮಾಡುತ್ತಿದ್ದರು. ಭಾಷಣ ಮಾಡಲು ಅವಕಾಶವೇ ನೀಡುತ್ತಿರಲಿಲ್ಲ. ನಮ್ಮ ಕ್ಷೇತ್ರದ ಹುಡುಗರು, ದರ್ಶನ್ ಅಭಿಮಾನಿಗಳು ಎಂದು ಕಾಣುತ್ತದೆ. ಬಾಸ್, ಬಾಸ್ ಎಂದು ಕೂಗುತ್ತಿದ್ದರು. ನಾನು ಯಾರಪ್ಪ ಬಾಸ್ ಎಂದು ನೋಡಿದಾಗ ದರ್ಶನ್ ಫೋಟೋ ಹಿಡಿದುಕೊಂಡಿದ್ದರು. ಆಗ ಅವರ ಸಮಾಧಾನಕ್ಕೆ ನ್ಯಾಯ ಕೊಡಿಸೋಣ ಎಂದು ಹೇಳಿದೆ” ಎಂದು ತಿಳಿಸಿದರು.
“ನಟ ದರ್ಶನ್ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೊಲೀಸ್ ತನಿಖೆ ನಡೆಯುತ್ತಿದೆ. ನಾವು ಯಾವುದೇ ಕಾರಣಕ್ಕೂ ಪೊಲೀಸ್ ವಿಚಾರಣೆ, ನ್ಯಾಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಮಾಡಲೂಬಾರದು. ಹಸ್ತಕ್ಷೇಪ ಮಾಡುವುದು ಒಳ್ಳೆಯದಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ನೀಡಲು ಕಾನೂನಿದೆ. ಕಾನೂನಿನ ಚೌಕಟ್ಟಿನಲ್ಲಿ ಎಲ್ಲರೂ ಒಂದೇ. ಏನೂ ಬೇಕಾದರೂ ಆಗಬಹುದು” ಎಂದರು.
ಅನ್ಯಾಯವಾಗಿದ್ದರೆ ನ್ಯಾಯ ಕೊಡಿಸಲಾಗುವುದು ಎನ್ನುವ ಹೇಳಿಕೆಯ ಬಗ್ಗೆ ಮತ್ತೆ ಕೇಳಿದಾಗ “ಒಂದೊಂದು ಮಾಧ್ಯಮಗಳಲ್ಲಿ ಒಂದೊಂದು ರೀತಿಯ ವರದಿ ಬರುತ್ತಿವೆ. ಮಾಧ್ಯಮಗಳಲ್ಲಿ ಬರುವ ವರದಿಗಳನ್ನು ಸಂಪೂರ್ಣವಾಗಿ ಗಮನಿಸಿಲ್ಲ, ನೋಡಲು ಸಮಯವೂ ಇಲ್ಲ. ಮಾಧ್ಯಮಗಳ ವರದಿಯ ಆಧಾರದ ಮೇಲೆ ತೀರ್ಮಾನಕ್ಕೆ ಬರಲು ಆಗುವುದಿಲ್ಲ. ನಾನು ಈ ಪ್ರಶ್ನೆಗೆ ಉತ್ತರ ನೀಡಲು ಗೃಹ ಸಚಿವನೂ ಅಲ್ಲ” ಎಂದರು.
ಕಾಂಗ್ರೆಸ್ ಯಾರನ್ನೂ ಬಳಸಿಕೊಳ್ಳುವುದಿಲ್ಲ:
ಇಡಿ ವಿರುದ್ಧ ದೂರು ನೀಡಿರುವ ಅಧಿಕಾರಿ ಕಲ್ಲೇಶ್ ಅವರು ಅಮಾನತ್ತು ಆಗಿದ್ದ ಅಧಿಕಾರಿ. ಅವರನ್ನು ಬಳಸಿಕೊಂಡು ಕಾಂಗ್ರೆಸ್ ದೂರು ನೀಡಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ “ಕಾಂಗ್ರೆಸ್ ಪಕ್ಷ ಯಾರನ್ನೂ ಬಳಸಿಕೊಳ್ಳುವ ಅವಶ್ಯಕತೆಯಿಲ್ಲ. ಆತ ದೂರು ಕೊಟ್ಟಿದ್ದಾನೆ. ಎಫ್ ಐಆರ್ ದಾಖಲಾಗಿದೆ, ಅದಕ್ಕೆ ನ್ಯಾಯಲಯ ತಡೆ ನೀಡಿದೆ ಎಂದು ಮಾಧ್ಯಮಗಳ ಮೂಲಕ ತಿಳಿದುಕೊಂಡೆ” ಎಂದರು.
ಕಲ್ಲೇಶ್ ಅವರ ಮೇಲೆ ಭ್ರಷ್ಟಾಚಾರದ ಆರೋಪದಿಂದ ಅಮಾನತು ಮಾಡಲಾಗಿತ್ತು ಎಂದಾಗ “ಆತ ತಪ್ಪು ಮಾಡಿದ್ದರೆ ಒಳಗೆ ಹಾಕುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.
ನಮ್ಮದು, ನಿಮ್ಮದು, ಬೇರೆಯವರದು ಬಿಚ್ಚಿಕೊಳ್ಳಲಿ
ಕಾಂಗ್ರೆಸ್ ಮತ್ತು ಬಿಜೆಪಿಯವರು ಶಾಮೀಲಾಗಿ ನಮ್ಮನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಜೈಲಿನಿಂದ ಹೊರಗಡೆ ಬಂದು ಎಲ್ಲಾ ಬಿಚ್ಚಿಡುತ್ತೇನೆ ಎನ್ನುವ ಜೆಡಿಎಸ್ ನಾಯಕ ಸೂರಜ್ ರೇವಣ್ಣ ಅವರ ಹೇಳಿಕೆಯ ಬಗ್ಗೆ ಕೇಳಿದಾಗ “ಅವರ ಹಕ್ಕನ್ನು ನಾವು ತಡೆಯಲು ಆಗುತ್ತದೆಯೇ? ನಿಮ್ಮದು, ನಮ್ಮದು, ಬೇರೆಯವರದು ಬಿಚ್ಚುವುದಿದ್ದರೇ ಬಿಚ್ಚಿಕೊಳ್ಳಲಿ” ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ