ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಪರೀಕ್ಷೆ ಆರಂಭವಾದ ಅರ್ಧಗಂಟೆಯಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪಿಯು ಕಾಲೇಜಿನಲ್ಲಿ ನಡೆದಿದೆ.
ಭೌತಶಾಸ್ತ್ರ ವಿಷಯದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ಆರಂಭವಾದ ಅರ್ಧ ಗಂಟೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಕೊಠಡಿ ಮೇಲ್ವಿಚಾರಕರು ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಿದ ಬೆನ್ನಲ್ಲೇ ಯಾರೋ ಕಿಡಿಗೇಡಿಗಳು ಮೊಬೈಲ್ನಲ್ಲಿ ಫೋಟೋ ತೆಗೆದು ಲೀಕ್ ಮಾಡಿದ್ದಾರೆ ಎನ್ನಲಾಗಿದೆ. ಕೃತ್ಯದ ಹಿಂದೆ ಕಾಲೇಜು ಸಿಬ್ಬಂದಿಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಪಿಯುಸಿ ಮಂಡಳಿ ಮುಂಜಾಗ್ರತಾ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಕಲ್ಪಿಸಲಾಗಿತ್ತಾದರೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ