*ಬೈಲಹೊಂಗಲ ಮಾಜಿ ಶಾಸಕ ವಿಶ್ವನಾಥ್ ಪಾಟೀಲ್ ಬಿಜೆಪಿ ಸೇರ್ಪಡೆ; ಕುತೂಹಲ ಮೂಡಿಸಿದ ಕೇಸರಿ ನಾಯಕರ ಲೆಕ್ಕಾಚಾರ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಲೋಕಸಭಾ ಬಿಜೆಪಿ ಟಿಕೆಟ್ ಗಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಯತ್ನಿಸುತ್ತಿರುವ ಬೆನ್ನಲ್ಲೇ ಇದೀಗ ಬೈಲಹೊಂಗಲ ಮಾಜಿ ಶಾಸಕ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತ ವಿಶ್ವನಾಥ್ ಪಾಟೀಲ್ ಬಿಜೆಪಿ ಸೇರ್ಪಡೆಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ವಿಶ್ವನಾಥ್ ಪಾಟೀಲ್ ಬಿಜೆಪಿಗೆ ಸೇರ್ಪಡೆಯಾದರು. ವಿಶ್ವನಾಥ್ ಪಾಟೀಲ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಜಗದೀಶ್ ಮೆಟಗುಡ್ ಗೆ ಬಿಜೆಪಿ ಟಿಕೆಟ್ ನೀಡಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ್ ಕೌಜಲಗಿ ಗೆಲುವು ಸಾಧಿಸಿದ್ದರು.
ಈ ಹಿಂದೆ ಕೂಡ ವಿಶ್ವನಾಥ ಪಾಟೀಲ ಬಿಜೆಪಿ ಬಿಟ್ಟು ಯಡಿಯೂರಪ್ಪ ಜೊತೆ ಕೆಜೆಪಿ ಸೇರಿದ್ದರು. ಆಗ ಬೈಲಹೊಂಗಲದಿಂದ ಶಾಸಕರೂ ಆಗಿದ್ದರು.
ಈಗ ಬೆಳಗಾವಿ ಲೋಕಸಭಾ ಬಿಜೆಪಿ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಈ ನಡುವೆ ವಿಶ್ವನಾಥ್ ಪಾಟೀಲ್ ಬಿಜೆಪಿಗೆ ಸೇರ್ಪಡೆಯಾಗಿದ್ದು, ಬೆಳಗಾವಿ ಲೋಕಸಭಾ ಅಖಾಡ ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ವಿಶ್ವನಾಥ್ ಪಾಟೀಲ್ ಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಿದೆಯೇ ಎನ್ನುವ ಕುತೂಹಲ ಮೂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ