Politics

*ಒಬ್ಬ ಜನಪ್ರತಿನಿಧಿಯಾಗಿ ಇಷ್ಟು ಬೇಜಾವಾಬ್ದಾರಿಯಿಂದ ನಡೆದುಕೊಳ್ಳುವುದು ಸರಿಯಲ್ಲ; ಶಾಸಕ ಶಿವರಾಮ್ ಹೆಬ್ಬಾರ್ ನಡೆಗೆ ಕಿಡಿಕಾರಿದ ಮಾಜಿ ಸ್ಪೀಕರ್ ಕಾಗೇರಿ*

ಪ್ರಗತಿವಾಹಿನಿ ಸುದ್ದಿ: ಸ್ವಪಕ್ಷದ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧವೇ ಕಿಡಿಕಾರಿರುವ ಮಾಜಿ ಸ್ಪೀಕರ್, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ, ಓರ್ವ ಜನಪ್ರತಿನಿಧಿಯಾಗಿ ಹೆಬ್ಬಾರ್ ಇಷ್ಟು ಬೇಜವಾಬ್ದಾರಿಯುತವಾಗಿ ನಡೆದುಕೊಳ್ಳಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಲೋಕಸಭಾ ಚುನಾವಣೆ ವೇಳೆ ಪ್ರಚಾರ ಕಾರ್ಯದಲ್ಲಿಯೂ ತೊಡಗಿಸಿಕೊಂಡಿಲ್ಲ. ಪಕ್ಷದಲ್ಲಿ ಹೆಬ್ಬಾರ್ ಒಂದು ನಿಲುವು ತೆಗೆದುಕೊಳ್ಳಬೇಕು. ಬಿಜೆಪಿಯಲ್ಲಿ ಅವರಿಗೆ ಸರಿಬರದಿದ್ದರೆ ರಾಜೀನಾಮೆ ಕೊಟ್ಟು ಹೋಗಬೇಕು. ಚುನಾವಾಣೆ ಎದುರಿಸಬೇಕು ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ಇಷ್ಟೊಂದು ಬೇಜವಾಬ್ದಾರಿಯಿಂದ ಹಗುರವಾಗಿ ನಡೆದುಕೊಳ್ಳಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿಯೂ ಲೋಕಸಭಾ ಚುನಾವಣಾ ಪ್ರಚಾರಕಾರ್ಯದಲ್ಲಿ ತೊಡಗಿಸಿಕೊಂಡಿಲ್ಲ. ಬಿಜೆಪಿಯ ಯಾವುದೇ ಸಭೆ, ಸಮಾರಂಭಗಳಲ್ಲಿಯೂ ಭಾಗಿಯಾಗುತ್ತಿಲ್ಲ. ಇತ್ತೀಚೆಗೆ ಇಬ್ಬರೂ ನಾಯಕರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಅಲ್ಲದೇ ಇಬ್ಬರೂ ನಾಯಕರು ಕಾಂಗ್ರೆಸ್ ನತ್ತ ಮುಖಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಬಿಜೆಪಿಗೆ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿತ್ತಿಲ್ಲ. ಇತ್ತ ಬಿಜೆಪಿ ಕಾರ್ಯಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳುತ್ತಿಲ್ಲ. ಸ್ವಪಕ್ಷದ ಶಾಸಕರಿಬ್ಬರ ಈ ನಡೆ ಬಿಜೆಪಿ ನಾಯಕರಿಗೆ ಇರಿಸುಮುರುಸು ಉಂಟುಮಾಡಿದೆ.

Related Articles

Back to top button