ಮಳೆಹಾನಿ: ತಕ್ಷಣ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಳೆದ ಮೂರು ದಿನಗಳಿಂದ ಜಿಲ್ಲೆಯ ಕೆಲವೆಡೆ ವ್ಯಾಪಕ ಮಳೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಸೇರಿದಂತೆ ಹಿರಿಯ ಅಧಿಕಾರಿಗಳು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮಳೆಯಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರು ಹುಕ್ಕೇರಿ ತಾಲ್ಲೂಕಿನ ಕೆಲವು ಪ್ರದೇಶಗಳಿಗೆ ಗುರುವಾರ(ಅ.12) ಭೇಟಿ ನೀಡಿದರು.
ಹತ್ತರಗಿ ಗ್ರಾಮದಲ್ಲಿ ತೋಟಗಾರಿಕೆ ಬೆಳೆಹಾನಿಯನ್ನು ಪರಿಶೀಲಿಸಿದರು.
ಡೊಣ್ಣಮೆಣಸಿನಕಾಯಿ(ಕ್ಯಾಪ್ಸಿಕಮ್) ಬೆಳೆಹಾನಿಯ ಕುರಿತು ರೈತರಿಂದ ಮಾಹಿತಿಯು ಪಡೆದುಕೊಂಡರು. ಇದೇ ರೀತಿ ಇತ್ತೀಚಿಗೆ ಮಳೆಯಿಂದ ಟೊಮ್ಯಾಟೊ ಬೆಳೆಹಾನಿಯಾಗಿತ್ತು. ಅದಕ್ಕೆ ಈಗಾಗಲೇ ಪರಿಹಾರವನ್ನು ನೀಡಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದರು.
ನಂತರ ಯಮಕನಮರಡಿ, ಹೊಸಪೇಟ, ಬೆಣ್ಣಿವಾಡ ಹಾಗೂ ಮದಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ ಅಧಿಕಾರಿಗಳು, ಮನೆಹಾನಿಯನ್ನು ಪರಿಶೀಲಿಸಿದರು.
ತಕ್ಷಣವೇ ಸಮೀಕ್ಷೆ ಪೂರ್ಣಗೊಳಿಸಲು ಸೂಚನೆ:
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಬೆಳೆಹಾನಿ ಹಾಗೂ ಮನೆಹಾನಿಗೆ ಸಂಬಂಧಿಸಿದಂತೆ ತಕ್ಷಣವೇ ಸಮೀಕ್ಷೆ ಕೈಗೊಂಡು ಸರಕಾರದ ಮಾರ್ಗಸೂಚಿ ಪ್ರಕಾರ ಆದಷ್ಟು ಬೇಗನೆ ಪರಿಹಾರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ಮನೆಹಾನಿ ಮತ್ತು ಬೆಳೆಹಾನಿಯ ಕುರಿತು ಕೂಡಲೇ ಜಂಟಿ ಸಮೀಕ್ಷೆ ಕೈಗೊಂಡು ಹಾನಿಯ ಕುರಿತು ಸಮಗ್ರ ವರದಿ ನೀಡುವಂತೆ ಹುಕ್ಕೇರಿ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಪಾಟೀಲ ಅವರು ಸ್ಥಳದಲ್ಲಿಯೇ ಸೂಚನೆ ನೀಡಿದರು.
ಹಾನಿಗೊಳಗಾದ ಯಾವುದೇ ಒಬ್ಬ ರೈತರು ಅಥವಾ ಒಂದೇ ಒಂದು ಕುಟುಂಬ ಕೂಡ ಸಮೀಕ್ಷೆಯಿಂದ ಹೊರಗುಳಿಯಬಾರದು. ಹಾನಿಗೊಳಗಾದ ಪ್ರತಿಯೊಬ್ಬರಿಗೂ ಪರಿಹಾರವನ್ನು ತಲುಪಿಸುವ ನಿಟ್ಟಿನಲ್ಲಿ ಪಿಡಿಓ, ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಎಂಜಿನಿಯರ್ ಗಳು ಪ್ರಯತ್ನಿಸಬೇಕು ಎಂದು ಹೇಳಿದರು.
ರೈತರು ಸರಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಂಡು ಪಾಲಿಹೌಸ್ ನಿರ್ಮಿಸುವ ಮೂಲಕ ಲಾಭದಾಯಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೃಷಿ ಹಾಗೂ ತೋಟಗಾರಿಕೆ ಅಧಿಕಾರಿಗಳು ಈ ನಿಟ್ಟಿನಲ್ಲಿ ರೈತರಿಗೆ ಮಾರ್ಗದರ್ಶನ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ಹುಕ್ಕೇರಿ ತಹಶೀಲ್ದಾರ ಡಿ.ಎಸ್. ಹೂಗಾರ ಸೇರಿದಂತೆ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದರು.
https://pragati.taskdun.com/belgaum-news/dc-sp-ceo-available-for-public-visit/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ