*ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ನಮ್ಮ ಸಹಮತವಿಲ್ಲ*: *ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವುದಕ್ಕೆ ನಮ್ಮ ಸಹಮತವಿಲ್ಲ. ಆದರೆ ಆಡಳಿತಾತ್ಮಕ ಅನುಕೂಲಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಪ್ರತ್ಯೇಕ ಜಿಲ್ಲೆ ರಚನೆ ಮಾಡುವುದಕ್ಕೆ ನಮ್ಮ ಬೆಂಬಲವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಹುಕ್ಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ವಿಭಜನೆ ಹಾಗೂ ಹೊಸ ಜಿಲ್ಲೆ ರಚನೆಯ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಈ ಬಗ್ಗೆ ಯಾವುದೇ ಅಪಸ್ವರ ಇಲ್ಲ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕುರಿತು ನೀಡಿರುವ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಜಿಲ್ಲೆ ವಿಭಜನೆ ವಿಚಾರದಲ್ಲಿ ಎಲ್ಲರೂ ಒಮ್ಮತ ಹೊಂದುವ ನಿರೀಕ್ಷೆಯಿದೆ. ಮುಂದಿನ ಬೆಳವಣಿಗೆಗಳನ್ನು ಕಾದು ನೋಡೋಣ ಎಂದು ಹೇಳಿದರು.
ಸವದಿ–ರಮೇಶ್ ಜಾರಕಿಹೊಳಿ ವಾಕ್ಸಮರ ವೈಯಕ್ತಿಕ ಜಗಳ
ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವಿನ ವಾಕ್ಸಮರದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇಬ್ಬರ ನಡುವಿನ ಜಗಳ ಸಂಪೂರ್ಣ ವೈಯಕ್ತಿಕ ವಿಚಾರವಾಗಿದೆ. ಅದು ರಾಜ್ಯದ ಅಥವಾ ದೇಶದ ಸಮಸ್ಯೆಯಲ್ಲ ಎಂದು ಹೇಳಿದರು.
ಒಬ್ಬರು ಮತ್ತೊಬ್ಬರ ಬಗ್ಗೆ ಟೀಕೆ ಮಾಡಿದ್ದಾರೆ, ಅವರು ಇವರಿಗೆ ಪ್ರತಿಯಾಗಿ ಮಾತನಾಡಿದ್ದಾರೆ. ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದಾರೆ. ಹೀಗಾಗಿ ಇಬ್ಬರ ಜಗಳ ಈಗ ಸಮಬಲದಲ್ಲಿದೆ ಎಂದು ವ್ಯಂಗ್ಯವಾಡಿದರು.
ಇದು ಅವರಿಬ್ಬರ ನಡುವಿನ ವೈಯಕ್ತಿಕ ಸಮಸ್ಯೆಯಾಗಿದ್ದು, ಅದನ್ನು ಅವರೇ ಕುಳಿತು ಬಗೆಹರಿಸಿಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದರು.




