*ಲಕ್ಷ್ಮೀ ಹೆಬ್ಬಾಳಕರ್‌ಗೆ ಸಚಿವ ಸ್ಥಾನ ನೀಡುವಂತೆ ಕೇಳಿದ್ದೇವೆ: ಸಚಿವ ಸತೀಶ್ ಜಾರಕಿಹೊಳಿ*

DCM ಆಗ್ತೀರಾ?
ಲಕ್ಷ್ಮೀ ಹೆಬ್ಬಾಳಕರ್ ಗೆ ಸಚಿವಸ್ಥಾನ ಕೊಡಲು ಹೇಳಿದ್ದೀರಾ?
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಂಚೆನೆ ಸಾಕಷ್ಟು ಸಲ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಹೇಳಿದ್ದೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳಕರ್ ಅವರು ಹಿರಿಯ ಶಾಸಕಿ, ಅವರಿಗೆ ಎಲ್ಲಾ ಮಾಹಿತಿ ಇದೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಪಕ್ಷದ ವೇದಿಕೆ ಮೇಲೆ ಸಾಕಷ್ಟು ಸಲ ಹೇಳಿದ್ದೇವೆ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಇಬ್ಬರು ನಾಯಕರು ಒಗ್ಗಟ್ಟಿನಿಂದ ಇದ್ದೇವೆ ಎಂದು ಸ್ಪಷ್ಟ ಪಡಿಸಿದ ಅವರು, ನಾವು ಒಟ್ಟಿಗೆ ಇದ್ದೇವೆ ಮತ್ತು ಮುಂದೆ ಭವಿಷ್ಯದಲ್ಲಿ ಒಟ್ಟಿಗೆ ಇರುತ್ತೇವೆ. ಮೊದಲು ಸಿದ್ದರಾಮಯ್ಯನವರ ಜೊತೆಗೆ ಹಿಂದೆ ಏನು ನಮ್ಮ ಸಂಬಂಧವಿತ್ತೋ, ಅದು ಈಗಲೂ ಹಾಗೇ ಮುಂದುವರಿದಿದೆ. ನಮ್ಮ ನಡುವೆ ಅಸಮಾಧಾನವಿದೆ ಎನ್ನುವುದು ಕಪೋಕಲ್ಪಿತ ಸುದ್ದಿ. ಸಿದ್ದರಾಮಯ್ಯನವರು ಅಧಿಕಾರದಲ್ಲಿ ಇರಲಿ, ಬಿಡಲಿ, ಅವರು ನಮ್ಮ ನಾಯಕರು. ಅವರ ಜೊತೆಗೆ ಮೊದಲಿನಿಂದಲೂ ಉತ್ತಮ ಬಾಂಧವ್ಯವಿದೆ. ಹಿರಿಯ ನಾಯಕರು, 2028ರಲ್ಲಿ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದರು.
ಹೈಕಮಾಂಡ್ ಮಟ್ಟದಲ್ಲಿ ಡಿಸಿಎಂ ಹುದ್ದೆ ಕುರಿತು ಚರ್ಚೆ ನಡೆದಿದ್ದು ನಿಜ
ನನಗೆ ಹಾಗೂ ಎಂ.ಬಿ. ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಕುರಿತು ಪಕ್ಷದೊಳಗೆ ಚರ್ಚೆ ನಡೆದಿರುವುದು ನಿಜ. ಆದರೆ ಎಲ್ಲವನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸಮಯ ಹಾಗೂ ಸಂದರ್ಭ ಬಂದಾಗ ಈ ಕುರಿತು ಮಾತನಾಡಲಾಗುವುದು ಎಂದು ಹೇಳಿದರು.
ಉಪಮುಖ್ಯಮಂತ್ರಿ ಹುದ್ದೆ ನೀಡುವ ವಿಚಾರ ಪಕ್ಷದ ಹಿತದೃಷ್ಟಿಯಿಂದ ಚರ್ಚೆಯಾಗುತ್ತಿತ್ತು. ಆದರೆ ನಾವು ಯಾವುದೇ ಬೇಡಿಕೆ ಇಟ್ಟಿಲ್ಲ. ಪಕ್ಷವೇ ನಮ್ಮನ್ನು ಗುರುತಿಸಬೇಕು. ಈ ವಿಚಾರದಲ್ಲಿ ನಾವು ಯಾವುದೇ ರೀತಿಯ ಒತ್ತಡ ಹೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಧಿವೇಶನದೊಳಗೆ ಖಾತೆ ಹಂಚಿಕೆ: ನೂತನ 19 ಸಚಿವರಿಗೆ ಇದೇ 14 ರೊಳಗಾಗಿ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಇನ್ನು ಎರಡು ದಿನಗಳಲ್ಲಿ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುನ್ನ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ತಮ್ಮ ಸಚಿವ ಖಾತೆ ಬದಲಾವಣೆ ಮಾಡಲಾಗುತ್ತದೆ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಖಾತೆ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ತಾವು ಕೂಡ ಯಾವುದೇ ಖಾತೆಯನ್ನು ಕೇಳಿಲ್ಲ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ. ಪಕ್ಷದ ನಾಯಕತ್ವ ಕೈಗೊಳ್ಳುವ ನಿರ್ಧಾರವನ್ನು ನಾವು ಗೌರವಿಸುತ್ತೇವೆ ಎಂದರು.
ಸದ್ಯ ತಾವು ನಿರ್ವಹಿಸುತ್ತಿರುವ ಲೋಕೋಪಯೋಗಿ ಇಲಾಖೆಯಲ್ಲಿಯೇ ಮುಂದುವರಿಯುವುದಾಗಿ ಸ್ಪಷ್ಟಪಡಿಸಿದ ಅವರು, ತಮಗೆ ನೀಡಿರುವ ಲೋಕೋಪಯೋಗಿ ಇಲಾಖೆಯ ಜವಾಬ್ದಾರಿಯನ್ನೇ ಮುಂದುವರಿಸಿಕೊಂಡು ಹೋಗುವುದಾಗಿ ಹೇಳಿದರು. ಉಳಿದ ಖಾತೆಯನ್ನು ಮಹಿಳೆಯರಿಗೆ ನೀಡುವ ವಿಚಾರ ಈಗಾಗಲೇ ಪೂರ್ಣಗೊಂಡಿದ್ದು, ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದನ್ನು ಪಕ್ಷವೇ ತೀರ್ಮಾನಿಸಲಿದೆ ಎಂದರು.



