Belagavi NewsBelgaum NewsKannada NewsKarnataka NewsNationalPolitics

*ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆ ಎದುರಿಸಲಿದ್ದೇವೆ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಬರುವ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮರ್ಥ ನೇತೃತ್ವದಲ್ಲಿಯೇ ನಾವು ಚುನಾವಣೆ ಎದುರಿಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಸೋಮವಾರ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲಿಯೇ ನಾವು ಮುಂದಿನ ಚುನಾವಣೆ ಎದುರಿಸಲಿದ್ದೇವೆ. ಸದ್ಯಕ್ಕೆ ಅಹಿಂದ ನಾಯಕತ್ವವನ್ನು ಯಾರು ಮುನ್ನಡೆಸಬೇಕು ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆಯ ಅಗತ್ಯವಿಲ್ಲ. ನಾಯಕತ್ವ ಬದಲಾವಣೆ ಎನ್ನುವುದು ಕಾಲಕಾಲಕ್ಕೆ ನಡೆಯುವ ಸಹಜ ಪ್ರಕ್ರಿಯೆ. ಅನಗತ್ಯ ಚರ್ಚೆಗಳಿಗಿಂತ ಅಹಿಂದ ವರ್ಗವನ್ನು ಮತ್ತಷ್ಟು ಬಲವಾಗಿ ಸಂಘಟಿಸುವುದೇ ನಮ್ಮ ಮೊದಲ ಆದ್ಯತೆಯಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸಚಿವ ಸಂಪುಟ ವಿಸ್ತರಣೆ ಹಾಗೂ ಹೊಸ ಸಚಿವರ ನೇಮಕದ ಕುರಿತು ಮಾಧ್ಯಮದವರು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮುಂದಿನ ಚುನಾವಣೆ ದೃಷ್ಟಿಯಿಂದ “ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳಲಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಗರಿಷ್ಠ ಅನುಕೂಲವಾಗುವ ಎಲ್ಲ ಅಂಶಗಳನ್ನು ಪರಿಗಣಿಸಿ ವರಿಷ್ಠರು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಹಾಲಿನ ದರ ಹೆಚ್ಚಳಕ್ಕೆ ರೈತರಿಂದ ಬೇಡಿಕೆ ವ್ಯಕ್ತವಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಹಾಲಿನ ದರ ಹೆಚ್ಚಳದ ವಿಷಯದಲ್ಲಿ ಸಂಬಂಧಿಸಿದ ಸಚಿವರು ಹಾಗೂ ಇಲಾಖೆಯೇ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದು, ಈ ಕುರಿತು ಸರ್ಕಾರದ ಮಟ್ಟದಲ್ಲಿ ಸಂಬಂಧಪಟ್ಟ ಸಚಿವರು ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

Home add -Advt

ಬೆಳೆ ಹಾನಿ ಸಮೀಕ್ಷೆ: ಜಿಲ್ಲೆಯಲ್ಲಿ ಸದ್ಯಕ್ಕೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಿಲ್ಲ. ಈಗಾಗಲೇ ಬಿತ್ತನೆ ಕಾರ್ಯ ಮುಗಿದಿದ್ದು, ಒಂದು ವೇಳೆ ಮುಂದೆ ಸಕಾಲಕ್ಕೆ ಮಳೆಯಾಗದಿದ್ದರೆ ತಕ್ಷಣವೇ ಜಂಟಿ ಸಮೀಕ್ಷೆ ನಡೆಸಿ, ರೈತರಿಗೆ ಸೂಕ್ತ ಪರಿಹಾರ ಕೊಡಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ಅಯೋಧ್ಯೆ ರಾಮ ಮಂದಿರದ ಹುಂಡಿ ಕಳ್ಳತನ ಪ್ರಕರಣದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಕೇಂದ್ರ ಸರ್ಕಾರವು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಇನ್ನು ಮುಂದೆ ನಮ್ಮ ರಾಜ್ಯದಲ್ಲಿ ಇಂತಹ ಕಳ್ಳತನ ಪ್ರಕರಣಗಳು ಮರುಕಳಿಸಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ಆಯಾ ದೇವಸ್ಥಾನಗಳಿಗೆ ಭಕ್ತರು ನೀಡುವ ಕಾಣಿಕೆ ಹಣವನ್ನು ಅದೇ ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಆಗಬೇಕೆಂದು ಸಚಿವರು ಹೇಳಿದರು.

Related Articles

Back to top button