*ಉಪ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ಇಂದು ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಎಲ್ಲಾ ಚುನಾವಣೆಗಳಿಗೂ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ. ನಮ್ಮ ಕೆಲಸ ನಾವು ಮಾಡುತ್ತಾ ಇದ್ದೀವಿ. ಮೂರು ಸೀಟ್ ಕೂಡ ಗೆಲ್ಲುತ್ತೇವೆ ಎಂದು ಹೇಳಿದರು.
ಇದೇ ವೇಳೆ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಯಾವಾಗ ಎಂಬ ಪತ್ರಕರ್ತರ ಪ್ರಶ್ನೆಗೆ ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ ಎಂದು ಮತ್ತೆ ಪುನರುಚ್ಚರಿಸಿದರು.
ಚನ್ನಪಟ್ಟಣದಲ್ಲಿ ಯೋಗೇಶ್ವರ್ ಬಂಡಾಯ ಎದ್ದಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನಾನು ಮಾಧ್ಯಮಗಳ ಮಾತನ್ನು ಕೇಳುವುದಿಲ್ಲ. ಅವರ ಪಕ್ಷಗಳಿಂದ ಅಭ್ಯರ್ಥಿ ಅಂತಿಮ ಆಯ್ಕೆಯಾಗಲಿ. ಅವರು ಕೈಗೊಳ್ಳುವ ನಿರ್ಧಾರದ ಬಗ್ಗೆ ಅಧಿಕೃತವಾಗಿ ಪ್ರಕಟಿಸಲಿ, ಆಗ ನಾನು ಅದನ್ನು ನಂಬುತ್ತೇನೆ” ಎಂದು ತಿಳಿಸಿದರು.
ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಹೆಚ್ಡಿ ಕುಮಾರಸ್ವಾಮಿಯವರು ಗೆದ್ದ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾದ ಚನ್ನಪಟ್ಟಣ ಕ್ಷೇತ್ರ, ಅದೇ ರೀತಿ ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ಕ್ಷೇತ್ರ ಹಾಗೂ ಇ. ತುಕಾರಾಂ ರಾಜೀನಾಮೆಯಿಂದ ತೆರವಾದ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಮೂರು ಕ್ಷೇತ್ರಗಳಲ್ಲೂ ನವೆಂಬರ್ 13 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಮತೆಣಿಕೆ ನಡೆಯಲಿದೆ.



