*ಹಿಂಗಾರು ಮಳೆ ಅಬ್ಬರ*: *ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಿಂಗಾರು ಮಳೆ ಅಬ್ಬರ ಜೋರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಾತ್ರಿಯಿಂದ ಧಾರಾಕಾರ ಮಳೆಯಾಗಿದೆ.
ಬೆಂಗಳೂರು ನಗರದಲ್ಲಿ ಮುಂಜಾನೆಯಿಂದ ಜಿಟಿ ಜಿಟಿ ಮಳೆಯಾಗುತ್ತಿದೆ. ಸಿಲಿಕಾನ್ ಸಿಟಿ ಸಂಪೂರ್ಣ ಕೂಲ್ ಕೂಲ್ ಆಗಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದರೆ, ಉತ್ತರ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಒಣ ಹವಾಮಾನವಿದೆ. ಮುಂದಿನ ಎರಡು ದಿನಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲವೆಡೆ ಮಳೆ ಮತ್ತೆ ಕೆಲವೆಡೆ ಒಣ ಹವೆ ಮುಂದುವರಿಯಲಿದೆ.
ಮೈಸೂರು, ಕೋಲಾರ, ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು, ರಾಮನಗರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ.
ಇನ್ನು ಅ. 26ರಂದು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಲಘು ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಒಣ ಹವಾಮಾನ ಕಂಡುಬರಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಕೋಲಾರ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ, ತುಮಕೂರು, ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಮಂಡ್ಯ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




